ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಯೋನಿಕ್ಸ್ ಘಟಕ ಸ್ಥಾಪಿಸುವ ಇರಾದೆಯಿದೆ. ಇದರಿಂದ ನೂರಾರು ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಯೋನಿಕ್ಸ್ ಘಟಕ ಸ್ಥಾಪನೆ.. ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಇಂದು ಮೊದಲ ಬಾರಿಗೆ ಬಂಟ್ವಾಳಕ್ಕೆ ಆಗಮಿಸಿದ ಅವರು ಬಿ ಸಿ ರೋಡ್ನ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮಂಗಳೂರು, ದ.ಕ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಗೆ ಕೇಂದ್ರವನ್ನು ತೆರೆದು ಐಟಿ ಕಂಪನಿಗಳ ಸ್ಥಾಪನೆಯ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಲಭೆಗಳು ನಡೆಯದಂತೆ ನೋಡಿಕೊಳ್ಳುವುದು ಪಕ್ಷದ ಕಾರ್ಯಕರ್ತರ ಜವಾಬ್ದಾರಿ ಎಂದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಪಕ್ಷದ ಸಂಘಟನೆಗೆ ಹರಿಕೃಷ್ಣ ಬಂಟ್ವಾಳ ಸಾಕಷ್ಟು ಕೊಡುಗೆ ನೀಡಿದ್ದು, ಕಿಯೋನಿಕ್ಸ್ ಮೂಲಕ ಯುವಕರಿಗೆ ಉದ್ಯೋಗ ದೊರಕಿಸಿ ಕೊಡುವ ಕಾರ್ಯ ಮಾಡಲಿದ್ದಾರೆ. ಐಟಿ ಬಿಟಿ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ಕೂಡ ಬೆಂಬಲ ನೀಡುವ ಭರವಸೆ ನೀಡಿದ್ದಾರೆ ಎಂದರು.
ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಹರಿಕೃಷ್ಣ ಬಂಟ್ವಾಳ್ ಅವರಿಗೆ ಅಭಿನಂದನೆ
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಹರಿಕೃಷ್ಣ ಬಂಟ್ವಾಳ ಅವರನ್ನು ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು. ಜನಾರ್ಧನ ಪೂಜಾರಿ ಭೇಟಿಯ ಬಳಿಕ ಹರಿಕೃಷ್ಣ ಬಂಟ್ವಾಳ್ ಬಿ.ಸಿ.ರೋಡ್ನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ನಾರಾಯಣ ಗುರು ಸಭಾಭವನದಲ್ಲಿ ಸಂಘದ ಅಧ್ಯಕ್ಷ ಕೆ ಸೇಸಪ್ಪ ಕೋಟ್ಯಾನ್ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭ ಮಾತನಾಡಿದ ಹರಿಕೃಷ್ಣ ಬಂಟ್ವಾಳ್, ಯುವಕರಲ್ಲಿ ದುಡಿಯುವ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಮ್ಮ ಜಿಲ್ಲೆಯ ವಿದ್ಯಾವಂತ ಯುವಕರಿಗೆ ಕಿಯೋನಿಕ್ಸ್ ಸಂಸ್ಥೆಯ ಮೂಲಕ ಉದ್ಯೋಗದ ಅವಕಾಶವನ್ನು ಸೃಷ್ಟಿಸುವ ಚಿಂತನೆಯಿದೆ. ಆ ಮೂಲಕ ಯುವಕರ ಬದುಕಿಗೆ ಬೆಳಕು ನೀಡುವ ಯೋಜನೆ ರೂಪಿಸುವುದಾಗಿ ತಿಳಿಸಿದರು.