ಕರ್ನಾಟಕ

karnataka

ETV Bharat / state

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ - ಆದಿತ್ಯ ರಾವ್​​​ಗೆ 20 ವರ್ಷ ಕಾರಾಗೃಹ ಶಿಕ್ಷೆ

2020ರ ಜನವರಿ 20ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಬಾಂಬ್ ಇರಿಸಿದ್ದ. ಪತ್ತೆಯಾಗಿದ್ದ ಬಾಂಬ್ ಅನ್ನು ಅಂದೇ ವಿಮಾನ ನಿಲ್ದಾಣ ಸಮೀಪದ ಕೆಂಜಾರು ಎಂಬಲ್ಲಿ ನಿಷ್ಕ್ರಿಯಗೊಳಿಸಲಾಗಿತ್ತು..

ಆದಿತ್ಯ ರಾವ್
ಆದಿತ್ಯ ರಾವ್

By

Published : Mar 16, 2022, 7:44 PM IST

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್​​ಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ 4ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಆದಿತ್ಯ ರಾವ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆತನಿಗೆ ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4ರ ಅನ್ವಯ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ, ದಂಡ ತೆರಲು ವಿಫಲವಾದಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ 1967ರ ಸೆಕ್ಷನ್ 16ರ ಅನ್ವಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ, ದಂಡ ತೆರಲು ವಿಫಲವಾದಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಜಿಲ್ಲಾ ನಾಲ್ಕನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ತೀರ್ಪು ವಿಧಿಸಿ ಆದೇಶಿಸಿದ್ದಾರೆ. ಅಪರಾಧಿ ಈ ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕು.

2020ರ ಜನವರಿ 20ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಬಾಂಬ್ ಇರಿಸಿದ್ದ. ಪತ್ತೆಯಾಗಿದ್ದ ಬಾಂಬ್ ಅನ್ನು ಅಂದೇ ವಿಮಾನ ನಿಲ್ದಾಣ ಸಮೀಪದ ಕೆಂಜಾರು ಎಂಬಲ್ಲಿ ನಿಷ್ಕ್ರಿಯಗೊಳಿಸಲಾಗಿತ್ತು.

ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸುತ್ತಿದ್ದರು. ಆದರೆ, ಅಪರಾಧಿ ಆದಿತ್ಯ ರಾವ್ 2020ರ ಜ.22ರಂದು ತಾನೇ ಬಾಂಬ್ ಇರಿಸಿರುವುದಾಗಿ ಬೆಂಗಳೂರಿನ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮುಂದೆ ಶರಣಾಗಿದ್ದ. ಅಂದಿನಿಂದ ಆದಿತ್ಯ ರಾವ್ ಕಾರಾಗೃಹ ವಾಸಿಯಾಗಿದ್ದಾನೆ.

For All Latest Updates

TAGGED:

ABOUT THE AUTHOR

...view details