ಮಂಗಳೂರು: ಕುದ್ರೋಳಿ ಗೋಕರ್ಣನಾಥ ದೇವಳದ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದೆ. ಪೂರಕ ತಯಾರಿಗಳು ಈಗಿನಿಂದಲೇ ನಡೆಯುತ್ತಿವೆ ಎಂದು ದೇವಳದ ಅಧ್ಯಕ್ಷ ಎಚ್.ಎಸ್.ಸಾಯಿರಾಂ ಹೇಳಿದರು.
ದೇವಳದಲ್ಲಿ ಇಂದು ನಡೆದ ದಸರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅ.7ರಿಂದ ಅ.16ರವರೆಗೆ ಮಂಗಳೂರು ದಸರಾ ಮಹೋತ್ಸವ ಆಯೋಜನೆ ಮಾಡಲಾಗಿದೆ. ಭಕ್ತಾದಿಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯವಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ದಸರಾ ಆಚರಣೆ ವೇಳೆ ನಗರದ ರಾಜ ಬೀದಿಗಳಲ್ಲಿ ವಿದ್ಯುತ್ ದೀಪಾಲಂಕಾರ ಇರಲಿದೆ ಎಂದರು.