ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಗೆ ಹೊಸ ರಿಕ್ಷಾ ಮತ್ತು 5 ಲಕ್ಷ ರೂಪಾಯಿ ಚೆಕ್ ಅನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಸ್ತಾಂತರಿಸಿದರು. ನಗರದ ಉಜ್ಜೋಡಿಯಲ್ಲಿರುವ ಪುರುಷೋತ್ತಮ ಪೂಜಾರಿ ಅವರ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ರಿಕ್ಷಾ ಮತ್ತು 5 ಲಕ್ಷ ರೂ. ಗಳ ಚೆಕ್ ಅನ್ನು ಹಸ್ತಾಂತರಿಸಲಾಯಿತು.
2022ರ ನವೆಂಬರ್ 19 ರಂದು ನಗರದ ಗರೋಡಿ ಬಳಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಶಂಕಿತ ಉಗ್ರ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟಿಸಲು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಗರೋಡಿ ಬಳಿ ಬಾಂಬ್ ಸ್ಫೋಟಗೊಂಡಿತ್ತು. ಇದರಲ್ಲಿ ಶಂಕಿತ ಉಗ್ರ ಶಾರೀಕ್ ಮತ್ತು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ತಿಂಗಳ ಹಿಂದೆ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಸಂದರ್ಭದಲ್ಲಿ ಅವರ ಮನೆಗೆ ಬಂದು ವೀಕ್ಷಿಸಿದ ಶಾಸಕ ವೇದವ್ಯಾಸ ಕಾಮತ್ ಅವರು ಪುರುಷೋತ್ತಮ ಪೂಜಾರಿ ಅವರಿಗೆ ತಮ್ಮ ವೈಯಕ್ತಿಕ ನಿಧಿಯಿಂದ ಹೊಸ ರಿಕ್ಷಾ ಮತ್ತು ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು.
ಅದರಂತೆ ಇಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ವೈಯಕ್ತಿಕ ನಿಧಿಯಿಂದ ಹೊಸ ರಿಕ್ಷಾ ಮತ್ತು ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂಗಳ ಚೆಕ್ ಅನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ನಗರದ ಬಿಜೆಪಿ ನಾಯಕರು, ವಿಹಿಂಪ ಮುಖಂಡ ಶರಣ್ ಪಂಪ್ ವೆಲ್, ಪುರುಷೊತ್ತಮ ಪೂಜಾರಿ ಕುಟುಂಬಸ್ಥರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆ ಹಲವು ವರ್ಷಗಳಿಂದ ನಡೆಯುತ್ತಿದೆ. ಇಸ್ಲಾಮಿಕ್ ರಾಷ್ಟ್ರ ಮಾಡಲು ದೊಡ್ಡ ಪ್ರಯತ್ನ ನಡೆಯುತ್ತಿದೆ. ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಆದ ನಂತರ ಅದನ್ನು ನಿಲ್ಲಿಸುವ ಕಾರ್ಯ ನಡೆಯುತ್ತಿದೆ. ಇವತ್ತು ಭಯೋತ್ಪಾದನಾ ಚಟುವಟಿಕೆ ಕಡಿಮೆಯಾಗಿದೆ. ಆದರೆ ಅಲ್ಲೊಂದು ಇಲ್ಲೊಂದು ಭಯೋತ್ಪಾದನಾ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪಿಎಫ್ ಐ ನ್ನು ನಿಷೇಧ ಮಾಡಲಾಗಿದೆ ಎಂದರು.