ಮಂಗಳೂರು:ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ ಮಾರಾಟ, ಸಾಗಾಟ ಜಾಲದಲ್ಲಿನ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ಮಹಿಳೆಯೋರ್ವಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ವಾಸವಿದ್ದ ನೈಜೀರಿಯಾದ ಒಂಡೋ ರಾಜ್ಯದ ಅಡೆವೊಲೆ ಅಡೆಟುಟು ಆನು ಯಾನೆ ಆಯಿಶಾ(33) ಬಂಧಿತ ಆರೋಪಿಯಾಗಿದ್ದಾಳೆ.
ಸಿಸಿಬಿ ಪೊಲೀಸರು ಇತ್ತೀಚೆಗೆ ಮಂಗಳೂರು ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಮುಖ ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದರು. ಈ ಡ್ರಗ್ಸ್ ದಂಧೆಯ ಕಿಂಗ್ ಪಿನ್ ಪತ್ತೆಗೆ ತನಿಖೆ ಕೈಗೊಂಡಿದ್ದರು. ಆಗ ಆರೋಪಿಗಳಿಗೆ ಮಾದಕ ವಸ್ತುಗಳನ್ನು ಬೆಂಗಳೂರಿನಲ್ಲಿ ವಾಸವಿದ್ದ ನೈಜೀರಿಯಾ ಮಹಿಳೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದರಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ.
ಮಹಿಳೆಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು, ಆಕೆ ಬಳಿ ಇದ್ದ ಒಟ್ಟು 400 ಗ್ರಾಂ ತೂಕದ 20 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಐಫೋನ್, 2,910 ರೂ. ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಿದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 20,52,910 ರೂ. ಎಂದು ಪೊಲೀಸರು ತಿಳಿಸಿದ್ದಾರೆ.