ಬಂಟ್ವಾಳ (ದಕ್ಷಿಣ ಕನ್ನಡ):ಬಂಟ್ವಾಳ ಪುರಸಭೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸುವ ಜೊತೆಗೆ ಅಭಿವೃದ್ಧಿ ಯೋಜನೆಗಳಿಗೆ ನೆರವು ನೀಡುವುದರ ಮೂಲಕ ಆಡಳಿತ ಯಂತ್ರ ಚುರುಕಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣ ಗೌಡ ಹೇಳಿದರು.
ಬಂಟ್ವಾಳ ಪುರಸಭೆ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು: ಸಚಿವ ಡಾ.ನಾರಾಯಣ ಗೌಡ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಅವರು ಬುಧವಾರ ಸಂಜೆ ಬಂಟ್ವಾಳಕ್ಕೆ ಭೇಟಿ ನೀಡಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಜೊತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದೆ ಯಾರೂ ಕೂಡ ಸರ್ಕಾರದ ಮೀಸಲಾತಿಯನ್ನು ಪ್ರಶ್ನಿಸದಂತೆ ಮುಖ್ಯಮಂತ್ರಿ ಕ್ಯಾಬಿನೆಟ್ ಉಪಸಮಿತಿಯನ್ನು ಮಾಡಿ, ಅದರ ನಿರ್ಣಯವನ್ನು ಹೈಕೋರ್ಟ್ಗೆ ಸಲ್ಲಿಸಲಾಗಿದೆ. ಶೀಘ್ರವೇ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.
ಇನ್ನು, ಬಂಟ್ವಾಳ ಪುರಸಭೆಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೀಡಿದ ಸಲಹೆಯನ್ನು ಗಮನದಲ್ಲಿರಿಸಲಾಗಿದೆ. ಪುರಸಭೆಯಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ಹಿರಿಯ ಸದಸ್ಯ ಎ. ಗೋವಿಂದ ಪ್ರಭು ಗಮನ ಸೆಳೆದಿದ್ದು, ಇದನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕೊರೊನಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರಯತ್ನಗಳು ಸಾಗಿದ್ದು, ಈ ವೇಳೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಆಡಳಿತ ಕೆಲಸ ಮಾಡುತ್ತಿದೆ ಎಂದರು.
ಸ್ಪೋರ್ಟ್ಸ್ ಕಾಂಪ್ಲೆಕ್ಸ್ಗೆ ತೋಟಗಾರಿಕಾ ಇಲಾಖೆಯಿಂದ ಜಮೀನು ಗುರುತಿಸುವ ಕಾರ್ಯ ನಡೆಯುತ್ತಿದೆ. ಅಡಿಕೆ ಬೆಳೆ ಸಹಿತ ಪ್ರಾಕೃತಿಕ ವಿಕೋಪವುಂಟಾದಾಗ ತೋಟಗಾರಿಕೆ ಬೆಳೆಗಳಿಗೆ ದೊರಕುವ ಪರಿಹಾರ ಮೊತ್ತ ಏರಿಸುವ ಕುರಿತು ಗಮನಹರಿಸುವುದಾಗಿ ತಿಳಿಸಿದರು.