ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಹೆಸರುವಾಸಿ. ಬುದ್ದಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಈ ಜಿಲ್ಲೆಗಳಲ್ಲಿ ನೈತಿಕ ಪೊಲೀಸ್‌ಗಿರಿ ಎಂಬುದು ಕಪ್ಪು ಚುಕ್ಕೆಯಾಗಿದೆ. ಸರಕಾರಗಳು ಬದಲಾದರೂ ಇಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಕಡಿವಾಣ ಬೀಳದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಎಂಬುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ ನಿರಂತರವಾಗಿ ನಡೆಯುತ್ತಿದೆ. ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ದಶಕಗಳಿಂದಲೂ ನಡೆಯುತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆಯುತ್ತಿದ್ದ ಪ್ರಕರಣಗಳನ್ನು ನಮ್ಮ ಸರಕಾರ ಬಂದರೆ ನಿಗ್ರಹಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದ್ದರೂ ಕಾಂಗ್ರೆಸ್ ಸರಕಾರ ಬಂದಿದ್ದು, ತಡೆಯಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಸರಕಾರ ಬಂದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಪ್ರಕರಣ ಮತ್ತು ಉಡುಪಿ ಜಿಲ್ಲೆಯಲ್ಲಿ 1 ಪ್ರಕರಣ ವರದಿಯಾಗಿದೆ.
ಘಟನೆ 1 :ಜೂನ್ 1 ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿತ್ತು.
ಘಟನೆ 2 :ಜುಲೈ 21ರಂದು ಪಣಂಬೂರು ಬೀಚ್ಗೆ ತೆರಳಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಯುವಕರ ಗುಂಪೊಂದು ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿತ್ತು. ಮಂಗಳೂರಿನ ಮೆಡಿಕಲ್ ಕಾಲೇಜೊಂದರ 6 ವಿದ್ಯಾರ್ಥಿಗಳು ಪಣಂಬೂರು ಬೀಚ್ಗೆ ಹೋಗಿದ್ದರು.
ಘಟನೆ 3:ಜುಲೈ 27ರಂದು ರಾತ್ರಿ 10 ಗಂಟೆಯ ಸುಮಾರಿಗೆ ಬಿ.ಸಿ.ರೋಡಿನಿಂದ ಪೊಲೀಸ್ ವಸತಿ ಗೃಹಕ್ಕೆ ಹೋಗುತ್ತಿದ್ದ ಪೊಲೀಸ್ ಸಿಬ್ಬಂದಿ ಕುಮಾರ್ ಮತ್ತು ಅವರ ಪತ್ನಿ ಮತ್ತು ಸಂಬಂಧಿಯವರನ್ನು ಹಿಂಬಾಲಿಸಿಕೊಂಡು ಹೋಗಿ ಪೊಲೀಸ್ ವಸತಿಗೃಹದ ಪರಿಸರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿತ್ತು.
ಘಟನೆ 4:ಮಂಗಳೂರಿನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್‌ಗಿರಿ ಜುಲೈ 28ರಂದು ನಡೆದಿತ್ತು. ಮಾಧ್ಯಮ ವರದಿಗಾರನ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದರು. ಸ್ನೇಹಿತೆಯ ಜೊತೆ ಊಟಕ್ಕೆ ತೆರಳಿದ್ದ ವರದಿಗಾರ ಅಭಿಜಿತ್ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿತ್ತು.
ಘಟನೆ 5:ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣ ಆಗಷ್ಟ್ 1 ರಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿತ್ತು. ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಮತ್ತು ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ನೈತಿಕ ಪೊಲೀಸ್‌ಗಿರಿ ನಡೆದಿತ್ತು.