ಪುತ್ತೂರು: ಪ್ರತಿ ವರ್ಷವೂ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗಳು ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲೆಯಲ್ಲಿ ತಂಡ ಸಿದ್ಧವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಪ್ರಾಕೃತಿಕ ವಿಕೋಪವನ್ನು ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 2 ಸಭೆಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗಿದೆ. ಎಲ್ಲಾ ಅಧಿಕಾರಿಗಳಿಗೂ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಗ್ರಾಮ ಮಟ್ಟದಲ್ಲಿ ಘಟನೆಗಳು ನಡೆದಾಗ ಸ್ಥಳೀಯ ಗ್ರಾಮ ಕರಣಿಕರು ತಹಸೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದ್ದು, ಸೂಕ್ತ ನಿರ್ವಹಣೆಗಾಗಿ ತಂಡವನ್ನು ರಚನೆ ಮಾಡಲಾಗಿದೆ. ಈ ತಂಡ ಎಲ್ಲವನ್ನೂ ನಿಭಾಯಿಸಲು ಸಿದ್ಧವಿದೆ ಎಂದರು.