ಮಂಗಳೂರು:ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವ ಪ್ರತಿಯೊಬ್ಬರಲ್ಲಿಯೂ ನೆಗೆಟಿವ್ ವರದಿ ಇರಬೇಕು. ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಆಗಮಿಸುವವರು ಪ್ರತಿ 7 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್ ತಪಾಸಣಾ ವರದಿ ತೋರಿಸಬೇಕು. ಇದನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಕೋವಿಡ್-19 ನಿರ್ವಹಣೆ'ಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಈ ವಿಚಾರ ತಿಳಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಮುಖವಾಗಿ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು. ಅಲ್ಲಿ ಕೊರೊನಾ ಪರೀಕ್ಷೆ ಮಾಡಬೇಕು, ಹೆಚ್ಚು ಜನರು ರೈಲಿನ ಮೂಲಕ ಬರುವ ಕಾರಣ ಅಲ್ಲಿ ಕೋವಿಡ್ ಟೆಸ್ಟ್ ಮಾಡುವ ಕೌಂಟರ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರೊನಾ ನಿರ್ವಹಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯದ್ದು ಸವಾಲಿನ ಕೆಲಸವೇ ಆಗಿದೆ. ನೆರೆಯ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳೂ ವ್ಯಾಪಕವಾಗಿವೆ. ಅಲ್ಲಿಂದ ಪ್ರತಿನಿತ್ಯ ಹಲವು ಕಾರ್ಯಗಳಿಗೆ ರಸ್ತೆಯ ಮೂಲಕ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚು, ಆದ ಕಾರಣ ಸೋಂಕು ನಿಯಂತ್ರಿಸಲು ಮುಂಬರುವ 15 ದಿನಗಳ ಕಾಲ ಕಠಿಣಾತಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಜಿಲ್ಲೆಯ ಗಡಿ ಭಾಗಗಳಲ್ಲಿ ತೆರೆಯಾಗಿರುವ ಚೆಕ್ಪೋಸ್ಟ್ಗಳಲ್ಲಿ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಬೇಕು. ಅದಕ್ಕಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸುವಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ನಿರ್ದೇಶನ ನೀಡಿದರು.
ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಜಿಲ್ಲೆಯಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಒಂದು ವಾರ ಕೇರಳ ರಾಜ್ಯದ ಕಾಸರಗೋಡಿಗೆ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಷೇಧಿಸಲಾಗುತ್ತದೆ. ಅಲ್ಲಿಂದ ಬಂದಂತಹ ವಿದ್ಯಾರ್ಥಿಗಳನ್ನು ಒಂದು ವಾರ ಕ್ವಾರಂಟೈನ್ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಗಡಿ ಭಾಗದಲ್ಲಿ 12 ಕಡೆ ಚೆಕ್‍ಪೋಸ್ಟ್ ರಚಿಸಲಾಗಿದೆ, ಅದರಲ್ಲಿ 6 ರಸ್ತೆ ಹಾಗೂ 6 ರೈಲ್ವೆ ಸ್ಟೇಷನ್‍ಗಳಲ್ಲಿ ಮಾಡಲಾಗಿದೆ. ಅವುಗಳಲ್ಲಿ ತಲಪಾಡಿ ಚೆಕ್‍ಪೋಸ್ಟ್ ಅತಿ ಮುಖ್ಯವಾದದ್ದಾಗಿದೆ, ಅಲ್ಲಿ 24/7 ಕಾಲ ತಪಾಸಣೆ ಮಾಡಲಾಗುತ್ತಿದ್ದು ವೈದ್ಯಕೀಯ ತುರ್ತು ಸೇವೆಗೆ ಹೊರತು ಪಡಿಸಿ, ಇತರೆ ಸಂಚಾರವನ್ನು ನಿಷೇಧಿಸಲಾಗುತ್ತಿದೆ ಎಂದರು.
ಇದನ್ನೂ ಓದಿ: ನಡೆದುಕೊಂಡು ಹೋಗ್ತಿದ್ದ ವ್ಯಕ್ತಿಗೆ ಅಡ್ಡಿಪಡಿಸಿ, ಕಾಲಿಗೆ ಸುತ್ತಿಕೊಂಡ ಹಾವು.. ವಿಡಿಯೋ ವೈರಲ್