ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ರಾತ್ರಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು (34) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಪೊಲೀಸರ ಕೈಗೆ ಸಿಗದೇ ತಲೆ ಮರೆಸಿಕೊಂಡಿರುವ ಪಿಎಫ್ಐ ಸಂಘಟನೆಗೆ ಸೇರಿದ ನಾಲ್ವರಿಗೆ ಲುಕೌಟ್ ನೋಟಿಸ್ ಜಾರಿ ಮಾಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರೂ ಆಗಿದ್ದ ಯುವ ವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರ್ ಅವರನ್ನು 2022ರ ಜು. 26ರಂದು ರಾತ್ರಿ 8.30ರ ವೇಳೆಗೆ ಬೆಳ್ಳಾರೆಯಲ್ಲಿ ಅವರದೇ ಮಾಲೀಕತ್ವದ ಅಕ್ಷಯ ಚಿಕನ್ ಸೆಂಟರ್ ಮುಂಭಾಗದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಲುಕೌಟ್ ನೋಟಿಸ್ ಜಾರಿ:ಈ ಪ್ರಕರಣಕ್ಕೆ ಸಂಬಂಧಿಸಿ ತನಿಖಾ ದಳದ ಅಧಿಕಾರಿಗಳು ಸುಳ್ಯ ತಾಲೂಕು ಬೆಳ್ಳಾರೆಯ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ. ಹೆಚ್ ಸುಳ್ಯ ತಾಲೂಕು ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್ ಅವರ ಪತ್ತೆಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ.