ಮಂಗಳೂರು:ಕಳೆದ ವರ್ಷ ಬಿಹಾರದಲ್ಲಿಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಭಯೋತ್ಪಾದಕ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ, ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣ ಜಾಲ, ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆ ಕಾರ್ಯ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿನ ಫುಲ್ವಾರಿ ಶರೀಫ್ ಪ್ರಕರಣಗಳೂ ಸೇರಿದಂತೆ ದೇಶದಲ್ಲಿ ಕೋಮು ಗಮಭೆ ಸೃಷ್ಠಿಸಲು ಯತ್ನಿಸಿದ ಆರೋಪಗಳೆಲ್ಲವೂ ಸೇರಿ ವಿವಿಧ ಪ್ರಕರಣಗಳ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನಿಖೆ ಪ್ರಗತಿಯಲ್ಲಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ ಹಲವು ಕಡೆಗಳಲ್ಲಿ ಸಾಕಷ್ಟು ಮನೆ, ಕಚೇರಿಗಳು, ಒಂದು ಆಸ್ಪತ್ರೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಇದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಶೋಧ ನಡೆದಿತ್ತು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಎಂಬವರನ್ನು ಎನ್ಐಎ ವಶಕ್ಕೆ ಪಡೆದಿತ್ತು. ಅದೇ ರೀತಿ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ.ಎಂಬಾತನನ್ನು ಬಂಧಿಸಿದ್ದರು.