ಮಂಗಳೂರು:ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ಮೂವರು ಆರೋಪಿಗಳ ಬಂಧನ:ಮೊದಲ ಪ್ರಕರಣದಲ್ಲಿ ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳ್ನೀರ್ ಪ್ರದೇಶದಲ್ಲಿ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉದ್ಯಾವರ ಮಂಜೇಶ್ವರದ ಮೊಹಮ್ಮದ್ ಹನೀಫ್ ಎ.ಎನ್.(47), ಸೈಯದ್ ಫೌಜಾನ್(30), ಸಿರಾಜುದ್ದೀನ್ ಅಬ್ಬೂಬಕ್ಕರ್(35) ಬಂಧಿತ ಆರೋಪಿಗಳು. ಮೂವರು ಬಂಧಿತರಿಂದ ಒಟ್ಟು 100 ಗ್ರಾಂ ತೂಕದ 5 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 4 ಸಾವಿರ ರೂ. ನಗದು, ಮಾರುತಿ ಸ್ವಿಫ್ಟ್ ಕಾರು, ಮೂರು ಮೊಬೈಲ್ ಫೋನುಗಳು, ಡಿಜಿಟಲ್ ತೂಕದ ಮಾಪನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 10,94,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓರ್ವ ಆರೋಪಿ ಬಂಧನ:ಎರಡನೇ ಪ್ರಕರಣದಲ್ಲಿ ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಒಬ್ಬನನ್ನು ಬಂಧಿಸಿದ್ದಾರೆ.