ಮಂಗಳೂರು : ಕೋವಿಡ್ ಪ್ರಸರಣ ತಡೆಯಲು ದ.ಕ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ, ಸಮಾರಂಭ ಮತ್ತು ಮನೋರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರು ಪಾಸ್ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬಹುದಾದ ಜನರ ಸಂಖ್ಯೆ (ಗರಿಷ್ಠ ಮಿತಿ) ಗೆ ಅನುಗುಣವಾಗಿ ಅಥವಾ ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ವಯ, ಆಹ್ವಾನಿತರ ವಿವರಗಳನ್ನು ಪಡೆದು ಪಾಸ್ ವಿತರಿಸಿ ಕೋವಿಡ್ ನಿಯಮಕ್ಕೆ ಬದ್ದರಾಗಿ ಕಾರ್ಯಕ್ರಮ ನಡೆಸಲು ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಪಾಲನೆಯಾಗುತ್ತಿರುವ ಬಗ್ಗೆ ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಕಾರ್ಯಕ್ರಮ ಆಯೋಜಕರು, ಸ್ಥಳದ ಮಾಲೀಕರಿಗೆ ದಂಡ ವಿಧಿಸಬೇಕು. ಸಂಬಂಧಪಟ್ಟ ಸಭಾಂಗಣ, ಕಲ್ಯಾಣ ಮಂಟಪ, ಹಾಲ್‍ಗಳು ಮತ್ತು ಕಾರ್ಯಕ್ರಮ ಸಂಘಟಕರ ಪರವಾನಿಗೆ ರದ್ದುಪಡಿಸಬೇಕು. ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020ರಡಿ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳಬೇಕು. ಈ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ಯಾವುದೇ ಲೋಪ ದೋಷಗಳಗಾದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಆಯಾ ಅಧಿಕಾರಿಯನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ತಹಶೀಲ್ದಾರರುಗಳು ತಾಲೂಕು ವ್ಯಾಪ್ತಿಯಲ್ಲಿ ಒಟ್ಟಾಗಿ ಮೇಲ್ವಿಚಾರಣೆ ಮಾಡಬೇಕೆಂದು ಡಿಸಿ ಸೂಚಿಸಿದ್ದಾರೆ.