ಪುತ್ತೂರು:28ನೇ ವರ್ಷದ ಹೊನಲು ಬೆಳಕಿನ ಪುತ್ತೂರು “ಕೋಟಿ-ಚೆನ್ನಯ” ಜೋಡುಕರೆ ಕಂಬಳ ಮಾ. 12 ಹಾಗೂ 13ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಹೇಳಿದ್ದಾರೆ.
ತುಳುನಾಡ ಪುರಾತನ ಜಾನಪದ ಕ್ರೀಡೆಗಳಲ್ಲೊಂದಾದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ದೇಶದಾದ್ಯಂತ ಅಭಿಮಾನಿಗಳ ಮಹಾಪೂರವೇ ಇದ್ದು, ಕಳೆದ ಹಲವಾರು ವರ್ಷಗಳಿಂದ ದಿ.ಎನ್.ಮುತ್ತಪ್ಪ ರೈ ಅವರು ಕೋಟಿ—ಚೆನ್ನಯ ಕಂಬಳವನ್ನು ಕಟ್ಟಿ ಬೆಳೆಸಿದ್ದಾರೆ. ಪದ್ಮವಿಭೂಷಣ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ವಿನಯಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಮಾ.12 ಶುಕ್ರವಾರ ಬೆಳಗ್ಗೆ 10.08ಕ್ಕೆ ಉದ್ಘಾಟನಾ ಸಮಾರಂಭವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಉದ್ಘಾಟಿಸಲಿದ್ದು, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಸಂತ ಫಿಲೋಮಿನಾ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ನಿರ್ದೇಶಕ ರೆ.ಫಾ.ಡಾ. ಆ್ಯಂಟನಿ ಮೊಂತೆರೋ ಮತ್ತಿತರ ಧಾರ್ಮಿಕ ಮುಖಂಡರು, ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.