ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಕರಾವಳಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಕರೆದಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಏ. 27 ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಅಂದು ಬೆಳಗ್ಗೆ ಉಡುಪಿ ಜಿಲ್ಲೆಯ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನ ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ಮಾಹಿತಿ ನೀಡಿದರು.
ಆ ಬಳಿಕ ಮಂಗಳೂರಿಗೆ ರಾಹುಲ್ ಗಾಂಧಿ ಆಗಮಿಸಿ ಸಂಜೆ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಗರದ ಬಲ್ಮಠದ ಕಲೆಕ್ಟರ್ ಗೇಟ್ನಿಂದ ಎ ಬಿ ಶೆಟ್ಟಿ ಸರ್ಕಲ್ ವರೆಗೆ ಸುಮಾರು ಎರಡು ಕಿಲೋ ಮೀಟರ್ ರೋಡ್ ಶೋ ಅನ್ನು ನಮ್ಮ ನಾಯಕ ನಡೆಸಲಿದ್ದಾರೆ. ರೋಡ್ ಶೋ ಮುಗಿಯುವ ಸಂದರ್ಭದಲ್ಲಿ ಅವರ ಭಾಷಣವನ್ನು ಆಯೋಜಿಸಲು ಪಕ್ಷ ಮುಂದಾಗಿದೆ. ರಾಹುಲ್ ಗಾಂಧಿಯವರ ರೋಡ್ ಶೋ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು, ಮತದಾರರು ಭಾಗಿಯಾಗಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ವಿವರಿಸಿದರು.
ಏ. 24,25 ಕ್ಕೆ ಖರ್ಗೆ ಮಂಗಳೂರಿಗೆ..ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.24 ಮತ್ತು 25 ರಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಏ.24 ರಂದು ಸಂಜೆ ಹೆಲಿಕಾಪ್ಟರ್ ನಲ್ಲಿ ಮಂಗಳೂರಿಗೆ ಬರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ. 25 ರಂದು ಮಾಧ್ಯಮಗೋಷ್ಟಿ ನಡೆಸಿ ಸುಳ್ಯದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಂದು ಅಭ್ಯರ್ಥಿ ಪರ ಉದ್ದೇಶಿಸಿ ಮಾತನಾಡುತ್ತಾರೆ. ನಂತರ ಸಂಜೆ ಮಂಗಳೂರಿನಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.