ಮಂಗಳೂರು: ಮಹಿಳೆಗೆ ಮದ್ಯ ಕುಡಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರ್ಯಾಪು ಗ್ರಾಮದ ನಿವಾಸಿ ಬಂಧಿತ ಆರೋಪಿಯಾಗಿದ್ದಾನೆ.
ಹಾಸನ ಜಿಲ್ಲೆಯವರಾದ ಸಂತ್ರಸ್ತ ಮಹಿಳೆ ನವೆಂಬರ್ 24ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ ಆರೋಪಿ ಪರಿಚಯ ಮಾಡಿಕೊಂಡಿದ್ದನು. ಬಳಿಕ ಆಕೆಗೆ ಮದ್ಯ ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ನವೆಂಬರ್ 25ರಂದು ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಹಾವೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
ಇತ್ತೀಚೆಗೆ ಮಂಡ್ಯದಲ್ಲಿ ಬ್ಲ್ಯಾಕ್ಮೇಲ್:ಸಹಪಾಠಿಗಳೇ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು. ಲಾಡ್ಜ್ಗೆ ಕರೆದೊಯ್ದು ಕೃತ್ಯ ಎಸಗಿದ್ದಲ್ಲದೇ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಸಂತ್ರಸ್ತೆಯ ಪೋಷಕರು ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳನ್ನು ಪೊಲೀಸರು ಬಂಧಿಸಿ, ಅತ್ಯಾಚಾರ, ಪೋಕ್ಸೊ, ಅಟ್ರಾಸಿಟಿ ಸೆಕ್ಷನ್ ಅಡಿ ಕೇಸ್ ದಾಖಲಿಸಲಾಗಿತ್ತು.
ಬಿಹಾರದಲ್ಲಿ ನರ್ಸರಿ ಬಾಲಕಿಯರ ಮೇಲೆ ಹೇಯ ಕೃತ್ಯ: ಬಿಹಾರದಲ್ಲಿ ನರ್ಸರಿ ಓದುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಶಾಲಾ ವಾಹನ ಚಾಲಕ ಹೇಯ ಕೃತ್ಯ ಎಸಗಿರುವುದು ಬುಧವಾರವಷ್ಟೇ ವರದಿಯಾಗಿದೆ. ಪುಟ್ಟ ಬಾಲಕಿಯರ ಮೇಲೆ ಪೈಶಾಚಿಕ ಕೃತ್ಯ ಎಸಗಿದ್ದಲ್ಲದೇ, ಅದನ್ನು ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಕೂಡ ಮಾಡಿಕೊಂಡಿದ್ದಾನೆ. ಚಾಲಕನ ವಿರುದ್ಧ ಪೋಕ್ಸೋ ಪ್ರಕರಣದಡಿ ದೂರು ದಾಖಲಾಗಿದೆ.
ಸಂತ್ರಸ್ತ ಬಾಲಕಿಯರಿಬ್ಬರೂ 5 ವರ್ಷ ವಯಸ್ಸಿನವರಾಗಿದ್ದಾರೆ. ಬುಧವಾರ ಶಾಲೆ ಮುಗಿಸಿ ಮನೆಗೆ ಕರೆದೊಯ್ಯವ ವೇಳೆ ಚಾಲಕ ಕೃತ್ಯ ಎಸಗಿ ಬಳಿಕ ಮನೆ ಬಳಿ ಬಿಟ್ಟು ಎಸ್ಕೇಪ್ ಆಗಿದ್ದ. ಅಸ್ವಸ್ಥ ಸ್ಥಿತಿಯಲ್ಲಿ ಬಾಲಕಿಯರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣವೇ ಶಾಲಾ ವಾಹನ ಚಾಲಕನನ್ನು ಸ್ಥಳೀಯರ ಸಹಾಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.
ಉತ್ತರ ಪ್ರದೇಶದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಾಲೆಯ ಶಿಕ್ಷಕನೇ ಹೈಸ್ಕೂಲ್ನಲ್ಲಿ ಓದುತ್ತಿದ್ದ 18 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. 7 ರಿಂದ 12 ವರ್ಷದೊಳಗಿನ ಬಾಲಕಿಯರ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಶಾಲೆಗೆ ಆಗಮಿಸಿ ಹೇಳಿಕೆ ದಾಖಲಿಸಿಕೊಂಡಿದ್ದರು. ಶಿಕ್ಷಕನ ವಿರುದ್ಧ ಪೊಲೀಸರು ಪೋಕ್ಸೊ ಸೇರಿದಂತೆ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.