ಮಂಗಳೂರು : ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರು 72 ಗಂಟೆಯೊಳಗೆ ನಡೆಸಲಾದ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಹೊಂದಿರುವುದು ಕಡ್ಡಾಯವಾಗಿದೆ. ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷಾ ವರದಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ತಿಳಿಸಿದ್ದಾರೆ.
ಹೊರ ರಾಜ್ಯದಿಂದ ಆಗಮಿಸುವವರಿಗೆ ವಿಶೇಷ ಸರ್ವೇಕ್ಷಣಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ಕೇರಳ ರಾಜ್ಯದಿಂದ ಆಗಮಿಸುವ ವ್ಯಕ್ತಿಗಳು ಆರ್ಟಿಪಿಸಿ ಆರ್ ನೆಗೆಟಿವ್ ಪರೀಕ್ಷಾ ವರದಿ ಹೊಂದುವುದು ಕಡ್ಡಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಸಾರ್ವಜನಿಕರು ವಿರಳವಾಗಿ ಸಂಚರಿಸುವ ರಸ್ತೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅನಾವಶ್ಯಕ ರಸ್ತೆಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ತಾಲೂಕುವಾರು ಚೆಕ್ ಪೋಸ್ಟ್ಗಳೊಂದಿಗೆ ಹೆಚ್ಚುವರಿ ಚೆಕ್ಪೋಸ್ಟ್ಗಳನ್ನು ತೆರೆಯಬೇಕು ಎಂದರು.
ಓದಿ : ನೀರಿ ಸೂಚನೆಗಳನ್ನು ಪಾಲಿಸಲು ಸರ್ಕಾರ ಬದ್ಧ: ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಹೈಕೋರ್ಟ್ ಸಮ್ಮತಿ
ಹೊರ ರಾಜ್ಯಗಳಿಂದ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡುವುದರೊಂದಿಗೆ 15 ದಿನಗಳಿಗೊಮ್ಮೆ ಪರೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಸ್ವಂತ ಊರಿಗೆ ಹೋದ ಸಂದರ್ಭ, ಮರಳಿ ಜಿಲ್ಲೆಗೆ ಬರುವಾಗ ಕಡ್ಡಾಯವಾಗಿ ನೆಗೆಟಿವ್ ಪರೀಕ್ಷಾ ವರದಿಯನ್ನು ತರಬೇಕು.
ಅವರ ಜೊತೆಗೆ ಜಿಲ್ಲೆಗೆ ಆಗಮಿಸುವ ಪೋಷಕರು ಕೂಡ ನೆಗೆಟಿವ್ ವರದಿ ತರಬೇಕು. ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಸ್ವಯಂ ಮೇಲ್ವಿಚಾರಣೆ ನಡೆಸಿಕೊಂಡು ಜ್ವರ, ಶೀತ, ಕೆಮ್ಮು, ಗಂಟಲು ನೋವು, ಉಸಿರಾಟದ ಸಮಸ್ಯೆ ಹಾಗೂ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು. ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು-ಹೆಚ್ಚು ಕೊರೊನಾ ಟೆಸ್ಟ್‌ಗಳನ್ನು ಮಾಡುವುದರೊಂದಿಗೆ ರೋಗಿಗಳನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡಬೇಕು. ಅಲ್ಲದೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸಬೇಕು. ಪ್ರತಿಯೊಬ್ಬ ನಾಗರಿಕನೂ ತಪ್ಪದೇ ಮಾಸ್ಕ್ ಧರಿಸಿಕೊಳ್ಳುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಎಂ ಜೆ ರೂಪ, ಮಂಗಳೂರು ಮಹಾನಗರಪಾಲಿಕೆ ಆಯುಕ್ತ (ಪ್ರಭಾರ) ದಿನೇಶ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪಾ ಭೋವಿ, ತಾಲೂಕು ಆರೋಗ್ಯಾಧಿಕಾರಿಗಳು, ತಹಶೀಲ್ದಾರರು ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.