ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ನಾಳೆ ( ಜು. 26 ) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಗ್ರಾಮೀಣ ಮತ್ತು ದೂರ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನೂಕೂಲವಾಗುವ ಸಂದರ್ಭದಲ್ಲಿ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾ ಸಂಸ್ಥೆಗಳು ಅವಕಾಶ ಕಲ್ಪಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.