ಮಂಗಳೂರು:ಮಂಗಳೂರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ದಾರೆ.
ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಜೈಕಾರ ಕೂಗಿ ಹಾರ ಸಮರ್ಪಿಸಿದರೆ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ಕ್ರಿಸ್ ಮಸ್ ಶುಭಾಶಯ ಸಲ್ಲಿಸಿದರು. ನಂತರ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿಯವರಿಗೆ ಬೇಕಾಗಿರುವುದು ಇಂಥಹದ್ದೇ. ಕುಕ್ಕರ್ ಬಾಂಬ್ ಸ್ಫೋಟವನ್ನು ರಾಜಕೀಯಗೋಸ್ಕರ ಬಿಜೆಪಿ ದುರುಪಯೋಗ ಮಾಡಿಕೊಂಡಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದರು. ಆದರೆ ಟೆರರಿಸಂಗೆ ಸಪೋರ್ಟ್ ಮಾಡುತ್ತೇವೆ ಎಂದು ಅವರು ಹೇಳಿಲ್ಲ. ಇದನ್ನೇ ಬಿಜೆಪಿಯವರು ತಿರುಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದ ಸಿದ್ದರಾಮಯ್ಯ, ಕೇಂದ್ರ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆಯಲ್ಲವೆ. ದೇಶದಲ್ಲಿ 9 ವರ್ಷದಿಂದ ಅಧಿಕಾರ ಮಾಡುತ್ತಿರುವವರು ಇವರಲ್ಲವೆ. ಹಾಗಾಗಿ ಭಯೋತ್ಪಾದನೆಯನ್ನು ಇವರು ಹತ್ತಿಕ್ಕಲಿ ಎಂದು ಒತ್ತಾಯಿಸಿದರು.