ಮಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆ ಭೇಟಿ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಸ್ಕರ್ ಫರ್ನಾಂಡಿಸ್ ಅವರು ಮಾಧ್ಯಮದಲ್ಲಿ ಪ್ರಸಾರವಾಗುವಂತೆ ಚಿಂತಾಜನಕ ಸ್ಥಿತಿಯಲ್ಲಿಲ್ಲ. ವೈದ್ಯರೊಂದಿಗೆ ಚರ್ಚಿಸಿದ ವೇಳೆ ಅವರು ಗುಣಮುಖರಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ ಕಾಂಗ್ರೆಸ್ ಕಾರ್ಯಕರ್ತರು ಆಸ್ಕರ್ ಫರ್ನಾಂಡಿಸ್ ಅವರು ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿದ್ದಾರೆ ಎಂದರು. ಸಂಜೆ ವೇಳೆಗೆ ಮಂಗಳೂರಿಗೆ ಆಗಮಿಸಿದ ಈ ಇಬ್ಬರು ನಾಯಕರು ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ತೆರಳಿ ಹಿರಿಯ ನಾಯಕ ಆಸ್ಕರ್ ಅವರ ಆರೋಗ್ಯ ವಿಚಾರಿಸಿದರು.
ಯೋಗ ಮಾಡುವ ವೇಳೆ ಜಾರಿ ಬಿದ್ದು, ಅದೇ ದಿನ ಡಯಾಲಿಸಿಸ್ಗೆ ಆಗಮಿಸಿದ್ದ ಆಸ್ಕರ್ ಅವರನ್ನು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಅವರ ತಲೆಯ ಒಳಭಾಗದಲ್ಲಿ ಗಾಯವಾಗಿ ಮೆದುಳಿನ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದು ಕಂಡು ಬಂದಿತ್ತು. ಬಳಿಕ ಆಸ್ಕರ್ ಫರ್ನಾಂಡಿಸ್ ಕೋಮಾ ಸ್ಥಿತಿಗೆ ತಲುಪಿದ್ದರು. ಅವರಿಗೆ ನಿನ್ನೆ ಮತ್ತು ಇಂದು ಡಯಾಲಿಸಿಸ್ ಚಿಕಿತ್ಸೆ ನೀಡಲಾಗಿದೆ.