ಮಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಮಟ್ಟದ ಧ್ವಜಾರೋಹಣ ನಡೆಯಲಿದೆ. ಈ ಸಂದರ್ಭ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ಅವಕಾಶ ಇರುವುದಿಲ್ಲ ಎಂದರು.
ಸಾರ್ವಜನಿಕರ ವೀಕ್ಷಣೆಗಾಗಿ ಕಾರ್ಯಕ್ರಮದ ಪೂರ್ಣ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ನಗರದ ಮುಖ್ಯ ವೃತ್ತದಲ್ಲಿ ಡಿಜಿಟಲ್ ಪರದೆಗಳನ್ನು ಅಳವಡಿಸಿ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಜನಸಾಮಾನ್ಯರು ತಮ್ಮ ದೇಶ ಭಕ್ತಿಯನ್ನು ಮನೆಯಲ್ಲಿಯೇ ಇದ್ದು ವ್ಯಕ್ತಪಡಿಸಬೇಕು ಎಂದು ಸೂಚನೆ ನೀಡಿದರು.
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಉತ್ತಮ ಕಾರ್ಯ ನಿರ್ವಹಿಸಿದ ಪೌರ ಕಾರ್ಮಿಕರು, ಆಶಾ ಕಾರ್ಯಕತೆಯರು, ಸ್ವಚ್ಚತಾ ಕಾರ್ಮಿಕರು, ಪೊಲೀಸರು, ವೈದ್ಯರ ಸೇವೆಯನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.