ಮಂಗಳೂರು:ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ನಾಳೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರೀಕ್ಷೆಗೆ ಎಲ್ಲಾ ರೀತಿಯ ಏರ್ಪಾಡುಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿಕೊಂಡಿದೆ.
ಜಿಲ್ಲೆಯಲ್ಲಿ 30,835 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೇರಳದ 367 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಎದುರಿಸಲಿದ್ದು ಕೇರಳ- ಕರ್ನಾಟಕ ಗಡಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಅವರನ್ನು ಕರೆತರುವ ವ್ಯವಸ್ಥೆಯೂ ಆಗಿದೆ. ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಪೂರ್ಣಗೊಳಿಸಲಾಗಿದ್ದು, ಶಿಕ್ಷಕರೇ ವಿದ್ಯಾರ್ಥಿಗಳಂತೆ ಅಣಕು ಪರೀಕ್ಷೆಯಲ್ಲಿ ಪಾಲ್ಗೊಂಡು ಪರೀಕ್ಷೆಗೆ ಪೂರ್ವ ಸಿದ್ಧತೆ ನಡೆಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬರಬೇಕಾಗಿದ್ದು ಇದಕ್ಕಾಗಿ ಆಯಾ ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷೆ ನಡೆಸಲಾಯಿತು. ಸಾಮಾಜಿಕ ಅಂತರ ಕಾಪಾಡಿಕೊಂಡು ಒಳಬರಲು ಮಾರ್ಕ್‌ಗಳನ್ನು ಹಾಕಲಾಗಿದೆ. ಪರೀಕ್ಷಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಮಾಸ್ಕ್‌ಗಳನ್ನು ನೀಡಿ ಕೇಂದ್ರದೊಳಗೆ ಬಿಡಲಾಗುತ್ತದೆ. ಶೀತ, ಜ್ವರ ಇದ್ದವರಿಗೆ ಪ್ರತ್ಯೇಕವಾಗಿ 102 ವಿಶ್ರಾಂತಿ ಕೊಠಡಿ ಮಾಡಲಾಗಿದ್ದು ಅಲ್ಲಿ ಕುಳಿತು ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 1,585 ಪರೀಕ್ಷಾ ಕೊಠಡಿಗಳಿವೆ. 1,318 ವಿದ್ಯಾರ್ಥಿಗಳು ಹೊರಜಿಲ್ಲೆಯಲ್ಲಿ ಪರೀಕ್ಷೆ ಬರೆದರೆ, ಹೊರಗಿನ 232 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕೇರಳ ಕರ್ನಾಟಕ ಗಡಿಭಾಗದಲ್ಲಿರುವುದರಿಂದ ಕೇರಳದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕೊರೊನಾ ಕಾರಣದಿಂದ ಕೇರಳ ಕರ್ನಾಟಕ ಗಡಿಬಂದ್ ಇರುವ ಕಾರಣ ಕೇರಳದ ಈ ವಿದ್ಯಾರ್ಥಿಗಳು ಕರ್ನಾಟಕ ಪ್ರವೇಶಕ್ಕೆ 29 ಚೆಕ್ ಪೋಸ್ಟ್ ತೆರೆಯಲಾಗಿದೆ. ಪ್ರತಿ ಚೆಕ್ಪೋಸ್ಟ್ಗೆ ನೋಡಲ್ ಅಧಿಕಾರಿ ನೇಮಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳ ಗಡಿಪ್ರವೇಶದ ಬಗ್ಗೆ ಕೇರಳ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರೀಕ್ಷೆಗೆ ಬರುವ ಎಲ್ಲ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಲಾಗಿದ್ದು ಇದರಲ್ಲಿ ಪರೀಕ್ಷಾ ಕೇಂದ್ರದ ಸಮೀಪವಿರುವ 3,135 ವಿದ್ಯಾರ್ಥಿಗಳು ಕಾಲ್ನಡಿಗೆ ಮುಖಾಂತರ, 12,156 ವಿದ್ಯಾರ್ಥಿಗಳು ಪಾಲಕರ ಜೊತೆಗೆ, 4,012 ವಿದ್ಯಾರ್ಥಿಗಳು ಶಾಲಾ ವಾಹನದಲ್ಲಿ ಬರುತ್ತಿದ್ದಾರೆ. 1,987 ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಖಾಸಗಿ ಶಾಲಾ ವಾಹನ ಸುಪರ್ದಿಗೆ ತೆಗೆದುಕೊಂಡು ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಲು ವ್ಯವಸ್ಥೆ ಮಾಡಿದೆ.