ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ಆರೋಪಿಗಳಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಚುನಾವಣಾ ಫಲಿತಾಂಶದ ಬಳಿಕ ಪುತ್ತೂರಿನಲ್ಲಿ ಬಿಜೆಪಿ ಸೋಲಿಗೆ ಕಾರಣರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿತ್ತು. ಪ್ರಕರಣದಲ್ಲಿ ಬಂಧಿತರಾದ 9 ಜನರ ಮೇಲೆ ಪೊಲೀಸ್ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
ಪ್ರಕರಣದಲ್ಲಿ ಪುತ್ತೂರು ನಗರ ಠಾಣೆ ಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವಿನಾಶ್ ಎಂಬವರು ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಠಾಣೆ ಡಿವೈಎಸ್ಫಿ, ಪಿಎಸ್‌ಐ ಮತ್ತು ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿಗೆ ವಹಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‌ಐ ಹಾಗೂ ಕಾನ್ಸ್ಟೇಬಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಪುತ್ತೂರು ಡಿವೈಎಸ್‌ಪಿ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ದಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ.
ಇದನ್ನೂ ಓದಿ:ಕಟೀಲ್, ಡಿವಿಎಸ್ ಭಾವಚಿತ್ರಕ್ಕೆ ಅವಮಾನ: ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯದ ಸತ್ಯಾಸತ್ಯತೆ ಪರಿಶೀಲನೆ- ಎಸ್ಪಿ