ಬೆಳ್ತಂಗಡಿ (ದ.ಕ): ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ತಹಶೀಲ್ದಾರರ ನಿಯೋಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅಭಿನಂದಿಸಿದೆ. ಬೆಂಗಳೂರಿನಲ್ಲಿ ಹಮ್ಮಿಕೊಂಡ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದ ಕೃಷಿಕರಿಗೆ ನೀರಾವರಿಗೆ ಅನುಕೂಲವಾಗುವಂತೆ ನಮ್ಮೂರು, ನಮ್ಮ ಕೆರೆ ಯೋಜನೆಯಲ್ಲಿ ಕೆರೆ ಅಭಿವೃದ್ಧಿ ಕಾರ್ಯಕ್ರಮ, ಎಸ್ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮೂಲಕ ಜನರ ಆರೋಗ್ಯ ರಕ್ಷಣೆಗೆ ಕಾಯಕಲ್ಪ ಮೊದಲಾದ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಹೆಗ್ಗಡೆಯವರನ್ನು ಅಭಿನಂದಿಸಿದರು.