ಮಂಗಳೂರು:ನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಹಲ್ಲೆಗೊಳಗಾದವರ ಪೈಕಿ ಯುವಕನೊಬ್ಬನ ಸಹೋದರ ಹೇಳಿಕೆ ನೀಡುವಾಗ ಉಳ್ಳಾಲ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಕಮಿಷನರ್ಗೆ ದೂರು ನೀಡಲಾಗಿದೆ. ಈ ದೂರಿನ ಬಗ್ಗೆ ತನಿಖೆ ನಡೆಸಲು ಪೊಲೀಸ್ ಕಮಿಷನರ್ ಕುಲದೀಪ್ ಜ್ಯೆನ್ ಅವರು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ಗೆ ಸೂಚಿಸಿದ್ದಾರೆ.
ಏನಿದು ಪ್ರಕರಣ?: ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಕ್ರವಾರ ಸಂಜೆ ಸೋಮೇಶ್ವರ ಸಮುದ್ರ ತೀರಕ್ಕೆ ವಾಯುವಿಹಾರಕ್ಕೆಂದು ಆಗಮಿಸಿದ್ದರು. ಇವರಲ್ಲಿ ಮೂವರು ಯುವಕರು ಅನ್ಯ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಅವರನ್ನು ಹಿಂಬಾಲಿಸಿತ್ತು. ಬಳಿಕ ಬೀಚ್ ಬಳಿ ವಿದ್ಯಾರ್ಥಿಗಳ ಹೆಸರು, ವಿಳಾಸ ಕೇಳಿದ್ದರು. ನಂತರು ವಿದ್ಯಾರ್ಥಿಗಳ ಮೇಲೆ ಹಲ್ಲೆಗೈದು ನೈತಿಕ ಪೊಲೀಸ್‌ಗಿರಿ ನಡೆಸಿದ್ದರು ಎಂದು ದೂರು ಹಲ್ಲೆಗೊಳಗಾದ ಯುವಕ ದೂರು ನೀಡಿದ್ದರು.
ಘಟನೆಯಲ್ಲಿ ಹಲ್ಲೆಗೊಳಗಾದ ಮೂವರು ಯುವಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಘಟನೆ ಬಳಿಕ ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿದ್ದಾರೆ. ಹಲ್ಲೆ ಕುರಿತು ಗಾಯಗೊಂಡವರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ತನಿಖೆ ಕೈಗೊಂಡಿದ್ದರು. ಜೊತೆಗೆ ಪ್ರಕರಣ ಭೇದಿಸಲು ಮೂರು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ಪೊಲೀಸ್ ತಂಡವು ಐವರನ್ನು ಬಂಧಿಸಿದೆ.
ಎಚ್ಚರಿಕೆ ನೀಡಿದ್ದ ಸಿಎಂ: ಸಿಎಂ ಸಿದ್ದರಾಮಯ್ಯ ಇತ್ತೀಚೆಗಷ್ಟೇ ನೈತಿಕ ಪೊಲೀಸ್‌ಗಿರಿ ಮಾಡದಂತೆ ಎಚ್ಚರಿಕೆ ನೀಡಿದ್ದರು. ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್‌ಗಿರಿಗೆ ಅಂತ್ಯ ಹಾಡಲಿದ್ದೇವೆ. ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಸಿಎಂ ಖಡಕ್ ಸಂದೇಶ ರವಾನಿಸಿದ್ದರು. ಅಲ್ಲದೇ, ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮಗಳಿಗೆ ಪೊಲೀಸ್ ಇನ್ಸ್ಪೆಕ್ಟರ್ ಮಾತ್ರ ಅಲ್ಲ, ಆ ವ್ಯಾಪ್ತಿಯ ಡಿಸಿಪಿ ಕೂಡಾ ಹೊಣೆಯಾಗುತ್ತಾರೆ. ಧರ್ಮಾತೀತವಾಗಿ ಕಾನೂನು ಪಾಲನೆ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಇತ್ತೀಚೆಗೆ ಸೂಚನೆ ನೀಡಿದ್ದರು.
ನೈತಿಕ ಪೊಲೀಸ್‌ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್.. ನೈತಿಕ ಪೊಲೀಸ್‌ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಆರಂಭಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಮಂಗಳವಾರ ಘೋಷಿಸಿದ್ದಾರೆ. ಈ ಕುರಿತು ಇಂದು ಪಶ್ಚಿಮ ವಲಯ ಐಜಿಪಿ ವ್ಯಾಪ್ತಿಯ ಮತ್ತು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ಸಹ ನಡೆಸಿದ್ದರು.
ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ್ದ ಸಚಿವರು, ಕರಾವಳಿಯಲ್ಲಿ ಭಾಗದಲ್ಲಿ ಭಯದ ವಾತಾವರಣ ಇದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನಾವು ತಡೆಯಲಿದ್ದೇವೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಕಠಿಣ ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್‌ಗಿರಿ ಇಲ್ಲಿ ತುಂಬಾ ನಡೆಯುತ್ತಿದೆ. ನೈತಿಕ ಪೊಲೀಸ್ ಗಿರಿಯನ್ನು ನಾವು ತಡೆಯದಿದ್ದರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ನೈತಿಕ ಪೊಲೀಸ್‌ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತಿರುವುದಾಗಿ ಹೇಳಿದ್ದರು.
ಇದನ್ನೂ ಓದಿ:ನಂಜನಗೂಡಿನ ಯುವಕನ ಮೇಲೆ ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳು ವಶಕ್ಕೆ