ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್. ಅವರ ಮೊಬೈಲ್ ಗೆ ಅಪರಿಚಿತವ್ಯಕ್ತಿಯೋರ್ವ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ 20ರ ಮಧ್ಯಾಹ್ನ 2.28ರ ಸುಮಾರಿಗೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಮ್ಮ ಕಚೇರಿಯಲ್ಲಿ ಚುನಾವಣಾ ವೀಕ್ಷಕರೊಂದಿಗೆ ಸಭೆಯನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೊಬೈಲ್ ಗೆ 7353998242 ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದೆ. ಜಿಲ್ಲಾಧಿಕಾರಿಯವರು ಕರೆ ಸ್ವೀಕರಿಸಿದ್ದು, ಈ ವೇಳೆ ಅಪರಿಚಿತ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ತಿಳಿದುಬಂದಿದೆ.