ದಕ್ಷಿಣಕನ್ನಡ: ಕಳೆದೊಂದು ವಾರದಿಂದ ರಾಜ್ಯಾದ್ಯಂತ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಸಂಬಂಧ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದೆ. ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡದಲ್ಲಿ ಇಂದು 2 ಪ್ರಕರಣ: ಜಿಲ್ಲೆಯಲ್ಲಿ ಮತ್ತೆ ಎರಡು ಕೊರೊನಾ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ. ನಿನ್ನೆ (ಬುಧವಾರ) 1 ಪ್ರಕರಣ ದೃಢಪಟ್ಟಿತ್ತು. ಉಡುಪಿ ಜಿಲ್ಲೆಯ ವೃದ್ಧರೊಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಸುಳ್ಯದ 83 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಉತ್ತರ ಭಾರತದ 40 ವರ್ಷದ ಕೂಲಿ ಕಾರ್ಮಿಕ ಉಸಿರಾಟದ ತೊಂದರೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೂ ಸೋಂಕು ತಗುಲಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.