ಬೆಳ್ತಂಗಡಿ: ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ನೋಡಿಕೊಳ್ಳುವುದೇ ಪ್ರಕೃತಿ ಚಿಕಿತ್ಸೆಯ ಉದ್ದೇಶ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು.
ಧರ್ಮಸ್ಥಳದ ಎಸ್‍ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಪ್ರಕೃತಿ ಚಿಕಿತ್ಸಾ ಸಾಧಕರ ವಾಸ್ತವ್ಯಕ್ಕಾಗಿ ನಿರ್ಮಿಸಲಾಗಿರುವ ಶಬರಿ, ವಾಲ್ಮೀಕಿ, ಗುಹಾ, ಏಕಲವ್ಯ ಕುಟೀರಗಳನ್ನು ಉದ್ಘಾಟನೆಗೊಳಿಸಿ ಮಾತನಾಡಿದ ಅವರು, ಎಸ್‍ಡಿಎಂನ ಪ್ರಕೃತಿ ಚಿಕಿತ್ಸಾಲಯದಲ್ಲಿ ಪಂಚಭೂತಗಳಿಂದ ಸೃಷ್ಟಿಯಾದ ದೇಹಕ್ಕೆ ಜಲ, ವಾಯು, ಮಣ್ಣು ಹೀಗೆ ಪಂಚಭೂತ ತತ್ವಗಳನ್ನು ಬಳಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಡಿ ವೀರೇಂದ್ರ ಹೆಗ್ಗಡೆಯವರು ಪ್ರಕೃತಿ ಚಿಕಿತ್ಸೆಯ ಮಹತ್ವವನ್ನು ನಾಡಿನೆಲ್ಲೆಡೆ ತಿಳಿಸಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.