ಮಂಗಳೂರು: ರಾಜ್ಯದಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ಈ ವರ್ಷದಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಸ್.ಟಿ.ಸೋಮಶೇಖರ್ ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ ಮತ್ತು ವರ್ಷದಿಂದ ವರ್ಷಕ್ಕೆ ಸಾಲ ವಿತರಣೆ ಪ್ರಮಾಣವನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದರು.
ಎರಡನೇ ರಾಜ್ಯ ಕರ್ನಾಟಕ:ಎಲ್ಲ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದ್ದು, ಭಾರತದಲ್ಲಿ ಕರ್ನಾಟಕ ಎರಡನೇ ಮುಂಚೂಣಿ ರಾಜ್ಯವಾಗಿದೆ. ಠೇವಣಿದಾರರ ವಿಶ್ವಾಸ ಉಳಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದಲ್ಲಿನ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಬಹುತೇಕ ಬ್ಯಾಂಕುಗಳು ಎ ಶ್ರೇಣಿ ಹೊಂದಿರುವುದರ ಜೊತೆಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕ್ರೆಡಿಟ್ ಸೊಸೈಟಿ, 21 ಡಿಸಿಸಿ ಬ್ಯಾಂಕ್ ಕೂಡ ಲಾಭದಲ್ಲಿದ್ದು, ಸಾವಿರಾರು ಜನರಿಗೆ ಉದ್ಯೋಗ, ಲಕ್ಷಾಂತರ ರೈತರಿಗೆ ಸಾಲ ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದರು.
ಯಶಸ್ವಿನಿ ಯೋಜನೆ ಮರುಜಾರಿ:ಯಶಸ್ವಿನಿ ಯೋಜನೆಯನ್ನು ಸಹಕಾರಿಗಳ ಬೇಡಿಕೆಯಂತೆ ಮರುಜಾರಿ ಮಾಡಲಾಗುತ್ತಿದೆ. ಯಶಸ್ವಿನಿ ಜನಪ್ರಿಯ ಯೋಜನೆಯಾಗಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆ ಜಾರಿಯಾಗಿತ್ತು. ಕಾರಣಾಂತರಗಳಿಂದ ಆರೋಗ್ಯ ಇಲಾಖೆ ಜೊತೆ ಯಶಸ್ವಿನಿ ವಿಲೀನವಾಗಿದೆ.
ರಾಜ್ಯದ ಪ್ರವಾಸದ ಸಂದರ್ಭದಲ್ಲಿ ಎಲ್ಲೆಡೆ ಯಶಸ್ವಿನಿ ಯೋಜನೆ ಮರುಜಾರಿಗೆ ಒತ್ತಾಯ ಕೇಳಿ ಬಂದಿದ್ದು, ಮುಖ್ಯಮಂತ್ರಿಗಳು ಈ ಯೋಜನೆಯನ್ನು ಮರುಜಾರಿ ಮಾಡಿ, 14ರಂದು ಚಾಲನೆ ನೀಡಿದ್ದಾರೆ. ಇದು ಎಲ್ಲ ಸಹಕಾರಿಗಳಿಗೆ ಅನುಕೂಲವಾಗಲಿದೆ ಎಂದರು.
ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ:ರಾಜ್ಯದಲ್ಲಿ 15 ಹಾಲು ಒಕ್ಕೂಟಗಳಲ್ಲಿ, ಸುಮಾರು 25 ಲಕ್ಷಕ್ಕೂ ಅಧಿಕ ರೈತರು ಹಾಲು ಪೂರೈಕೆ ಮಾಡುತ್ತಿದ್ದಾರೆ. ಹಾಲು ಪೂರೈಸುವ ರೈತರಿಗೆ ಆರ್ಥಿಕವಾಗಿ ಅನುಕೂಲ ಕಲ್ಪಿಸಲು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದೆ. ಬ್ಯಾಂಕ್ ಸ್ಥಾಪನೆ ಸಂಬಂಧ ನ.25ಕ್ಕೆ ಆರ್ ಬಿಐ ಜೊತೆಗೆ ಸಭೆ ನಿಗದಿಯಾಗಿದೆ ಎಂದರು.
ನಬಾರ್ಡ್ ನಿಂದ ನೀಡುವ ಸಾಲದ ಹಣ ದ್ವಿಗುಣ ಗೊಳಿಸಲು ಕ್ರಮವಹಿಸಲಾಗಿದೆ. ಸಾಲ ಪಡೆದವರಿಗೆ ಕಿರುಕುಳ ನೀಡುತ್ತಿಲ್ಲ. ರೈತರು ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡುತ್ತಿದ್ದಾರೆ. 90% ಡಿಸಿಸಿ ಬ್ಯಾಂಕ್, ವಿಶೇಷವಾಗಿ ಸ್ವಸಹಾಯ ಗುಂಪುಗಳಿಂದ 100% ಸಾಲ ಮರುಪಾವತಿ ಆಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಾರಾಟ ಮಂಡಳಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್, ಶಾಸಕ ವೇದವ್ಯಾಸ ಡಿ. ಕಾಮತ್, ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್ ಪಾಲ್ ಎ.ಸುವರ್ಣ, ಸಹಕಾರ ಸಂಘಗಳ ನಿಬಂಧಕರಾದ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಪ್ರಾಥಮಿಕ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಮೊದಲ ಬಾರಿಗೆ 3 ತೃತೀಯ ಲಿಂಗಿಗಳ ಆಯ್ಕೆ