ಹರಿಹರ:ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿಗಳ ವ್ಯಾಪ್ತಿಯಲ್ಲಿ ಆಗಸ್ಟ್ 11ರ ಮಂಗಳವಾರ ರಾತ್ರಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ಕಿಡಿಗೇಡಿಗಳು ನಡೆಸಿದ ಹಲ್ಲೆಯನ್ನು ಹರಿಹರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ ಎಂದು ಸಂಘದ ಅಧ್ಯಕ್ಷ ಶೇಖರಗೌಡ ಪಾಟೀಲ್ ಹೇಳಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿಗೆ ತೆರಳಿ ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿಗಳಲ್ಲಿ ಮಾಧ್ಯಮದವರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ, ತಹಶೀಲ್ದಾರ್ ಕೆ.ಬಿ ರಾಮಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು. ತಕ್ಷಣವೇ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದರು.
ಯಾವುದೋ ನೆಪದಲ್ಲಿ ನೂರಾರು ಮಂದಿ ಸೇರಿ ಕಾನೂನು ಕೈಗೆತ್ತಿಕೊಂಡು ಸುದ್ದಿಗೆ ತೆರಳಿದ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಪತ್ರಕರ್ತರ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಯನ್ನು ಖಂಡಿಸಿ ರಾಜ್ಯಾದ್ಯಂತ ಕರ್ನಾಟಕ ಪತ್ರಕರ್ತರ ಸಂಘ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.
ಸುದ್ದಿ ಮಾಡಲು ಹೋದ ದೃಶ್ಯ ಮತ್ತು ಮುದ್ರಣ ವರದಿಗಾರರ ಮೇಲೆ ಹಲ್ಲೆ ನಡೆಸಿ ಕ್ಯಾಮೆರಾ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ನಾಶಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಕ್ರಮಕೈಗೊಂಡು ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿ ಮಾಧ್ಯಮದವರಿಗೆ ಸೂಕ್ತ ರಕ್ಷಣೆ ನೀಡಬೇಕು. ಹಾಗೂ ಹಲ್ಲೆಕೋರರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹರಿಹರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿ ತಹಶೀಲ್ದಾರ್ ರಾಮಚಂದ್ರಪ್ಪ ಮಾತನಾಡಿ, ತಕ್ಷಣ ಮನವಿಯನ್ನು ಮುಖ್ಯಮಂತ್ರಿಗಳಿಗೆ ಕಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಪತ್ರಕರ್ತರಾದ ಡಾ.ಕೆ.ಜೈಮುನಿ, ಮಂಜುನಾಥ ಪೂಜಾರ್, ಆರ್.ಮಂಜುನಾಥ್, ಶಾಂಭವಿ, ವಿಶ್ವನಾಥ್, ಶಿವಪ್ಪ, ಕೃಷ್ಣ ಮತ್ತು ಸುಬ್ರಹ್ಮಣ್ಯ ನಾಡಿಗೇರ್ ಉಪಸ್ಥಿತರಿದ್ದರು.