ದಾವಣಗೆರೆ: ನಗರಾಭಿವೃದ್ಧಿಗೆ 27 ಸಾವಿರ ಕೋಟಿ ಹಣವನ್ನು ಬಜೆಟ್‌ನಲ್ಲಿ ಮೀಸಲಿಟ್ಟದ್ದು, ರಾಜ್ಯದ ಮಹಾನಗರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.
ತಾಲೂಕಿನ ಬೆಳ್ಳೂಡಿ ಗ್ರಾಮದ ಹೊರವಲಯದಲ್ಲಿರುವ ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಶಾಖಾಮಠಕ್ಕೆ ಭೇಟಿ ನೀಡಿ ಶ್ರೀ ನಿರಂಜನಾಂದಪುರಿ ಶ್ರೀಗಳ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.5 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಡಿಸಿದ ಬಜೆಟ್ ತೃಪ್ತಿಕರವಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿಯ ಚಿಂತನೆ ಇಟ್ಟುಕೊಂಡು ಮಂಡಿಸಿದ ಬಜೆಟ್ ಇದಾಗಿದೆ. ಮಹಾನಗರ ಪಾಲಿಕೆಗಳ ಸಮಗ್ರ ಅಭಿವೃದ್ಧಿಗೆ ನಾವು ಈಗಾಗಲೇ ನೀಲ ನಕ್ಷೆಯನ್ನು ಸಿದ್ದಪಡಿಸಿದ್ದು ಮೊದಲು ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡಲು ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರವು ದಾವಣಗೆರೆಯ ಅಭಿವೃದ್ಧಿಗೆ ಮಾತ್ರ ಸೀಮಿತವಾಗಿದ್ದು, ಇದುವರೆಗೂ ಹರಿಹರ ನಗರದಲ್ಲಿ ದೂಡಾದಿಂದ ಒಂದೂ ನಿವೇಶನವನ್ನು ನೀಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಸಚಿವನಾಗಿ ಕೇವಲ 30 ದಿನಗಳು ಮಾತ್ರ ಕಳೆದಿವೆ. ಈಗಾಗಲೇ ಉನ್ನತ ಮಟ್ಟದ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದ್ದು, ಇದೇ ರೀತಿ ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಸಭೆ ನಡೆಸಿ ಇಲ್ಲಿನ ನ್ಯೂನತೆಗಳನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸರ್ಕಾರವು ನಗರಾಭಿವೃದ್ಧಿ ಪ್ರಾಧಿಕಾರದಿಂದ 50*50 ಅನುಪಾತದಲ್ಲಿ ನೂತನ ಬಡಾವಣೆ ನಿರ್ಮಾಣಕ್ಕೆ ಬದ್ಧವಾಗಿದ್ದು, ಈ ವಿಚಾರವಾಗಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ರಾಜ್ಯದ ಕೆಲವು ಮಹಾನಗರಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಪ್ರಗತಿಯಲ್ಲಿದ್ದು, ದಾವಣಗೆರೆಯಲ್ಲಿ ನಡೆಯುತ್ತಿರುವ ಕಾಮಗಾರಿ ಕಳಪೆ ಮಟ್ಟದ್ದು ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ ಎಂಬ ಪ್ರಶ್ನೆಯನ್ನು ಅಲ್ಲಗಳೆದ ಅವರು, ಶೀಘ್ರದಲ್ಲಿ ನಗರಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ಮಾಡುತ್ತೇನೆ ಎಂದರು.
ಮಹೇಶ್ ಕುಮಟಳ್ಳಿ ಸಚಿವ ಸ್ಥಾನದಿಂದ ವಂಚಿತರಾದ ಬಗ್ಗೆ ಗಮನ ಸೆಳೆದಾಗ ಶೀಘ್ರದಲ್ಲಿ ಅವರಿಗೂ ಅಧಿಕಾರ ಸಿಗುವ ವಿಶ್ವಾಸವಿದ್ದು, ಮುಖ್ಯಮಂತ್ರಿಗಳೂ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ಇದರಲ್ಲಿ ನಮಗೆ ಭರವಸೆ ಇದೆ ಎಂದರು.