ದಾವಣಗೆರೆ: ಮಾಜಿ ಸಚಿವರೊಬ್ಬರ ಒಡೆತನದ ಮಿಲ್ ಹಿಂಭಾಗದ ಫಾರ್ಮ್ ಹೌಸ್ ಮೇಲೆ ಸಿಸಿಬಿ ಪೊಲೀಸರು ಬುಧವಾರ ದಾಳಿ ನಡೆಸಿದ್ದರು. ಈ ವೇಳೆ ಸಾಕಷ್ಟು ವನ್ಯಜೀವಿಗಳು ಪತ್ತೆಯಾಗಿವೆ ಎಂದು ಡಿಎಫ್ಒ ಜಗನ್ನಾಥ್ ಮಾಹಿತಿ ನೀಡಿದ್ದಾರೆ.
ಎರಡು ನರಿಗಳು, 10 ಕೃಷ್ಣಮೃಗಗಳು, ಏಳು ಚುಕ್ಕೆ ಜಿಂಕೆಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದ ಸೆಂಥಿಲ್:ಡಿ.18ರಂದು ಬೆಂಗಳೂರು ನಗರದ ಹೆಬ್ಬಾಳದಲ್ಲಿ ಈ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದ ಸೆಂಥಿಲ್ ಎಂಬ ವ್ಯಕ್ತಿ ಜಿಂಕೆ ಚರ್ಮ, ಜಿಂಕೆ ಕೊಂಬು, ಜಿಂಕೆ ಮೂಳೆ ಮಾರಾಟ ಮಾಡಲು ಬಂದಿದ್ದ. ಈ ವೇಳೆ, ಆತ ಸಿಸಿಬಿ ಪೋಲಿಸರ ಬಲೆಗೆ ಬಿದ್ದಿದ್ದ. ಆತನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದಾನೆ. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಜೀವಂತ ವನ್ಯಪ್ರಾಣಿಗಳು ಸಿಕ್ಕಿವೆ ಎಂದು ಡಿಎಫ್ಒ ಜಗನ್ನಾಥ್ ಮಾಹಿತಿ ನೀಡಿದ್ದಾರೆ.