ದಾವಣಗೆರೆ: ಕೊರೊನಾ ಸೋಂಕಿನ ಭೀತಿ ನಡುವೆಯೂ ಜೂನ್ 25 ರಿಂದ ಜುಲೈ 4ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಅಭದ್ರತೆ, ಕಳವಳವಿಲ್ಲದೇ ಪರೀಕ್ಷೆ ಎದುರಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಒಂದು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟು 21,683 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವುದಾಗಿ ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ಸಮರ್ಪಕ ಸಾರಿಗೆ ವ್ಯವಸ್ಥೆ ಮಾಡಬೇಕು. ಪ್ರತಿ ಪರೀಕ್ಷೆಯ ಮುನ್ನ ಒಟ್ಟು 7 ಬಾರಿ ಕೊಠಡಿಗಳನ್ನು ಡಿಸ್‍ಇನ್‍ಫೆಕ್ಷನ್ ಮಾಡಲಾಗುವುದು. ನಗರದಲ್ಲಿ ಮಹಾನಗರಪಾಲಿಕೆ, ಪಟ್ಟಣಗಳಲ್ಲಿ ಪಟ್ಟಣ ಮತ್ತು ಪುರಸಭೆಗಳು ಹಾಗೂ ಗ್ರಾಮೀಣ ಭಾಗದಲ್ಲಿ ಅಲ್ಲಿನ ಸ್ಥಳೀಯ ಸಂಸ್ಥೆಗಳು ಪರೀಕ್ಷಾ ಕೇಂದ್ರಗಳನ್ನು ಡಿಸ್ಇನ್‍ಫೆಕ್ಷನ್ ಮಾಡುವ ಕೆಲಸ ಮಾಡಲಿದ್ದು, ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಯೋಜನೆ ಮಾಡಿಕೊಂಡು ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.