ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಕ್ರಮ ತಡೆಗೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದೆ. ಹಲವೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ.
ಗ್ರಾ.ಪಂ. ಚುನಾವಣೆ ಅಕ್ರಮ ತಡೆಗೆ ಬಿಗಿ ಕ್ರಮ: 89 ಕಡೆ ದಾಳಿ, ಮದ್ಯ ವಶ - Davangere
ದಾವಣಗೆರೆ ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ. ಒಟ್ಟು 89 ಕಡೆ ದಾಳಿ ನಡೆಸಲಾಗಿದ್ದು, 65 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಬಿ. ಶಿವಪ್ರಸಾದ್ ತಿಳಿಸಿದ್ದಾರೆ.
ನ.30 ರಂದು ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. 10 ದಿನಗಳಲ್ಲಿ ಜಿಲ್ಲೆಯಾದ್ಯಂತ ಒಟ್ಟು 89 ಕಡೆ ದಾಳಿ ನಡೆಸಲಾಗಿದ್ದು, 65 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ 416 ಲೀಟರ್ ವಿಸ್ಕಿ, 54 ಲೀಟರ್ ಬಿಯರ್, 12 ದ್ವಿಚಕ್ರ ವಾಹನ, 1 ಆಟೋ ರಿಕ್ಷಾ ಹೀಗೆ ಒಟ್ಟು 13 ವಾಹನಗಳನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ಮದ್ಯ ಮತ್ತು ವಾಹನಗಳ ಮೌಲ್ಯ ಅಂದಾಜು ರೂ. 5,83,784 ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಬಿ. ಶಿವಪ್ರಸಾದ್ ತಿಳಿಸಿದ್ದಾರೆ.
ಚುನಾವಣೆಯನ್ನು ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು, ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಒಟ್ಟು 10 ಸಂಚಾರಿ ದಳಗಳನ್ನು ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ 1, ಉಪವಿಭಾಗ ಮಟ್ಟದಲ್ಲಿ 2, ವಲಯ ಮಟ್ಟದಲ್ಲಿ 5 ಕಂಟ್ರೋಲ್ ರೂಂ ಸೇರಿದಂತೆ ಒಟ್ಟು 8 ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.