ದಾವಣಗೆರೆ: ಭೂ ಸುಧಾರಣೆ ತಿದ್ದುಪಡಿ ಸೇರಿದಂತೆ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಡಿಸೆಂಬರ್ 7 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರಾಜ್ಯ ರೈತ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ರೈತ ವಿರೋಧಿ ನೀತಿಗಳ ವಿರುದ್ಧ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಆಗಬೇಕಿದ್ದು, ಸಂಘಟಿತ ಹೋರಾಟ ಅಗತ್ಯ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬದುಕು ಕಸಿದುಕೊಳ್ಳುತ್ತಿವೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಈಗಾಗಲೇ ಹೋರಾಟ ನಡೆಸಿದ್ದೇವೆ. ಇನ್ನು ಪ್ರಬಲವಾಗಿ ಒಟ್ಟಾಗಿ ಹೋರಾಡುವ ಅಗತ್ಯ ಇದೆ. ಪ್ರತಿಯೊಬ್ಬ ರೈತರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾದ ಅಗತ್ಯತೆ ಇದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರೈತ ಉತ್ಪನ್ನಗಳ ಖರೀದಿ ಕೇಂದ್ರ ಆರಂಭಿಸಬೇಕು. ಮೆಕ್ಕೆಜೋಳ, ಭತ್ತ ಸೇರಿದಂತೆ ಬೆಳೆಗಳ ಖರೀದಿ ಕೇಂದ್ರ ಪ್ರಾರಂಭಿಸುವವರೆಗೂ ಹೋರಾಡೋಣ ಎಂದು ಕೋಡಿ ಹಳ್ಳಿ ಚಂದ್ರಶೇಖರ್ ಕರೆ ನೀಡಿದರು.