ದಾವಣಗೆರೆ :ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಜೈಲು ಸೇರಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಈ ಬಾರಿ ಟಿಕೆಟ್ ಕಂಟಕವಾಗಿ ಪರಿಣಮಿಸಿದೆ. ಇನ್ನು ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ಗೂ ಕೂಡ ಟಿಕೆಟ್ ಸಿಗುವುದು ಡೌಟ್ ಎಂಬ ವಿಚಾರ ಚನ್ನಗಿರಿ ಬಿಜೆಪಿಯಲ್ಲಿ ಕೇಳಿಬರುತ್ತಿದೆ.
ಇದೀಗ ಚನ್ನಗಿರಿ ಟಿಕೆಟ್ ಹಂಚಿಕೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ದಿಢೀರ್ ಅಂತಾ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿ ಸದ್ಯ ಇದೀಗ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಮಧ್ಯೆ ಚನ್ನಗಿರಿ ಕ್ಷೇತ್ರಕ್ಕೆ ಮಾಡಾಳ್ ಮಲ್ಲಿಕಾರ್ಜುನ್ಗೆ ಟಿಕೆಟ್ ನೀಡುವಂತೆ ಪಕ್ಷದ ಹೈಕಮಾಂಡ್ಗೆ ತಾಲೂಕಿನ ಬಿಜೆಪಿ ಮುಖಂಡರು ಸಭೆ ನಡೆಸಿ ಒತ್ತಾಯ ಮಾಡಿದ್ದಾರೆ.
ತಂದೆಯ ಅನುಪಸ್ಥಿತಿಯಲ್ಲಿ ಪಕ್ಷದ ಮೇಲಿನ ಹಿಡಿತ ಗಟ್ಟಿಗೊಳಿಸಲು ಪುತ್ರ ಮಾಡಾಳ್ ಮಲ್ಲಿಕಾರ್ಜುನ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಟಿಕೆಟ್ ಘೋಷಣೆ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆ ಚನ್ನಗಿರಿ ತಾಲೂಕಿನ ಬಹುತೇಕ ಪ್ರಮುಖ ನಾಯಕರನ್ನು ಕರೆದು ಮಹತ್ವದ ಸಭೆ ನಡೆಸಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ಕ್ಷೇತ್ರದಲ್ಲಿ ಹಿರಿಯ ಪುತ್ರ ಹಿಡಿತ: ಲಂಚ ಸ್ವೀಕಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು. ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಹೀಗಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದ್ದು ಅವರ ಹಿರಿಯ ಪುತ್ರ ಕ್ಷೇತ್ರದಲ್ಲಿ ತಮ್ಮ ಬಿಗಿ ಹಿಡಿತ ಸಾಧಿಸುತ್ತಿದ್ದಾರೆ ಎಂಬುದು ಕೇಳಿಬರುತ್ತಿದೆ.