ದಾವಣಗೆರೆ:ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಆದ್ರೂ ಮುನ್ನೆಚ್ಚರಿಕೆ ಕ್ರಮವಾಗಿ ಚಿಕಿತ್ಸೆಗೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನರು ಹೆದರುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ ಕೊರೊನಾ ವೈರಸ್ ಪ್ರಕರಣ ಇಲ್ಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಅನ್ವಯ ಕೊರೊನಾ ವೈರಸ್ ಪ್ರಕರಣಗಳ ಕುರಿತು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊರೊನೊ ವೈರಸ್ ಮೂಲ ಚೀನ. ವಿದೇಶಿ ಪ್ರವಾಸಿಗರು, ಪ್ರಯಾಣಿಕರಿಂದ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಕೊರೊನಾ ವೈರಸ್ ಪ್ರಕರಣಗಳನ್ನು ಸಾಂಕ್ರಾಮಿಕವಾಗಿ ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಅನುಸರಿಸಬೇಕಾದ ಕಾರ್ಯವಿಧಾನಗಳ ಬಗ್ಗೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸುಳ್ಳು ಸುದ್ದಿ ಹಬ್ಬಿಸಿದರೆ ಪ್ರಕರಣ ದಾಖಲು:ಕೊರೊನೊ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಯಾರೂ ವಂದಂತಿ, ಸುಳ್ಳು ಸುದ್ದಿಗಳನ್ನು ಹರಡಬಾರದು. ಇಂತಹ ಕೃತ್ಯದಲ್ಲಿ ತೊಡಗಿದ್ದು ಕಂಡು ಬಂದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್ ಮಾತನಾಡಿ, ಕೊರೊನಾ ವೈರಸ್ ಒಂದು ಸೂಕ್ಷ್ಮ ವೈರಸ್ ಆಗಿದ್ದು, ಇದೊಂದು ಸಾಂಕ್ರಾಮಿಕ ಸೋಂಕಾಗಿರುವ ಕಾರಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪಕ್ಕದ ಆಂಧ್ರ, ಕೇರಳ ಸೇರಿದಂತೆ ದೇಶದ ಹಲವೆಡೆ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸರ್ಕಾರ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಷ್ಟಾನಗೊಳಿಸಲು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
ಡಿಹೆಚ್‍ಓ ಡಾ. ರಾಘವೇಂದ್ರ ಸ್ವಾಮಿ ಮಾತನಾಡಿ, ಬಾಪೂಜಿ ನರ್ಸಿಂಗ್ ಹೋಂ ಹಾಗೂ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿಯೂ ಸಹ ಐದು ಬೆಡ್‍ಗಳನ್ನು ಈ ಸೋಂಕಿಗಾಗಿ ಮೀಸಲಿಡಾಗಿದೆ. ಇತ್ತೀಚೆಗೆ ಜಿಲ್ಲೆಯ 14 ಜನ ಪ್ರವಾಸಿಗಳು ಹಾಂಕಾಂಗ್, ಸಿಂಗಾಪುರ, ಥಾಯ್ಲೆಂಡ್, ಮಲೇಶಿಯಾ, ಜಪಾನ್, ಕೊರಿಯ, ವಿಯೆಟ್ನಾಂ, ನೇಪಾಳ, ಇಟಲಿ, ಇಂಡೋನೇಷ್ಯಾ, ಇರಾನ್, ಯು.ಎ.ಇ ಸೇರಿದಂತೆ ಒಟ್ಟು 12 ದೇಶಗಳಿಗೆ ಪ್ರವಾಸ ಕೈಗೊಂಡಿದ್ದು, ಇವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ ಯಾರಿಗೂ ಕೊರೊನಾ ವೈರಸ್ ಸೋಂಕು ಕಂಡು ಬಂದಿಲ್ಲ. ಆದರೂ ಈ ಪ್ರಯಾಣಿಕರನ್ನು 14 ದಿನಗಳ ಕಾಲ ಮನೆಯೊಳಗೇ ಇರಿಸಿ ತೀವ್ರ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.