ದಾವಣಗೆರೆ/ಗದಗ: ರಾಜ್ಯದ ನೆರೆ ಸಂತ್ರಸ್ತರ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿಸಿದೆ ಎಂದು ಆರೋಪಿಸಿ ದಾವಣಗೆರೆಯಲ್ಲಿಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನೆರೆ ಸಂತ್ರಸ್ಥರ ನೆರವಿಗೆ ಬಾರದ ಕೇಂದ್ರ ಸರ್ಕಾರ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಗರದ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಸಂತ್ರಸ್ತರಿಗೆ ಈವರೆಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಇತ್ತ ಯಡಿಯೂರಪ್ಪನವರು ಕುರ್ಚಿ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ ಎಂದು ದೂರಿದರು.
ಇನ್ನಾದರೂ ಕೇಂದ್ರ ಸರ್ಕಾರ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಸಿದರು.
ಗದಗ ಜಿಲ್ಲಾದ್ಯಂತ ಕಾಂಗ್ರೆಸ್ ನೇತೃತ್ವದಲ್ಲಿ ನೆರೆ ಸಂತ್ರಸ್ತರ ಪ್ರತಿಭಟನೆ:
ಜಿಲ್ಲೆಯ ರೋಣ ಹಾಗೂ ನರಗುಂದ ತಾಲೂಕಿನ ಹಲವು ಗ್ರಾಮಗಳಲ್ಲಿ ಮಲಪ್ರಭ ಹಾಗೂ ಬೆಣ್ಣೆ ಹಳ್ಳದ ಪ್ರವಾಹದಿಂದ ಸಾವಿರಾರು ಜನ ಮನೆ ಹಾಗೂ ಬೆಳೆ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಲಕ್ಷಾಂತರ ಜನರು ಬೀದಿಗೆ ಬಿದ್ದಿದ್ದಾರೆ ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿರೋ ಹಿನ್ನೆಲೆ ಗದಗ ಜಿಲ್ಲೆಯ ನೆರೆ ಸಂತ್ರಸ್ತರು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ರು.
ಸರಿಯಾದ ಪರಿಹಾರ ನೀಡಿಲ್ಲ, ಜಿಲ್ಲಾಡಳಿತ ಕೊಟ್ಟ ಹತ್ತು ಸಾವಿರ ರೂಪಾಯಿ ಯಾವುದಕ್ಕೂ ಸಾಲುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನರಗುಂದ ಹಾಗೂ ರೋಣದ ತಹಶೀಲ್ದಾರ್ ಕಚೇರಿ ಎದುರು ಕಾಂಗ್ರೆಸ್ ಪಕ್ಷದ ಗದಗ ಜಿಲ್ಲಾಧ್ಯಕ್ಷ ಜಿ ಎಸ್ ಪಾಟೀಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜನ ನೆರೆ ಸಂತ್ರಸ್ತರು ಪಾಲ್ಗೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸರ್ಕಾರ ನೆರೆ ಸಂತ್ರಸ್ತರಿಗೆ ಸ್ಪಂದಿಸಿ ಹಣ ಬಿಡುಗಡೆ ಮಾಡಿ ಅವರ ಜೀವನಕ್ಕೆ ದಾರಿ ಮಾಡಿ ಕೊಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ನೀಡಿದ್ರು.