ದಾವಣಗೆರೆ:ಕೃಷಿ ಸಂಬಂಧಿತ ಮಸೂದೆಗಳ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘ, ಕಾಂಗ್ರೆಸ್ ಕಿಸಾನ್ ಘಟಕದ ನೇತೃತ್ವದಲ್ಲಿ ತಾಲೂಕಿನ ಬಾಡಾ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಸುಮಾರು ಎರಡು ಗಂಟೆಗಳ ಕಾಲ ಹೆದ್ದಾರಿ ತಡೆ ನಡೆಸಿದರು. ಇದರಿಂದ ಕೆಲಕಾಲ ಸಂಚಾರ ಅಡಚಣೆ ಉಂಟಾಯಿತು. ಕಿಲೋಮೀಟರ್ಗಟ್ಟಲೇ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು.
ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಕೇಂದ್ರದ ಕೃಷಿ ಮಸೂದೆಗಳು ಮತ್ತು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ತಿದ್ದುಪಡಿಗಳು ರೈತರಿಗೆ ಮಾರಕವಾಗಿದೆ. ಈಗಾಗಲೇ ಸಾಲದ ಸುಳಿಗೆ ಸಿಲುಕಿ ಜೀವನ ಸಾಗಿಸಲು ಪರದಾಡುತ್ತಿರುವ ಅನ್ನದಾತರಿಗೆ, ಈ ಮಸೂದೆಗಳಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೂಡಲೇ ಮಸೂದೆಗಳನ್ನು ವಾಪಸ್ ಪಡೆಯಬೇಕು. ಬಹು ರಾಷ್ಟ್ರೀಯ ಕಂಪೆನಗಳ ಹಿತಕ್ಕೆ ಮಣಿದು ರೈತರ ಹಿತಾಸಕ್ತಿ ಮರೆತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರದಂದು ದಾವಣಗೆರೆಯಲ್ಲಿ ಬಂದ್ಗೆ ಕರೆ ನೀಡಲಾಗಿದೆ. ವರ್ತಕರು, ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ಬೆಂಬಲ ನೀಡಬೇಕು. ಅಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ತಿಳಿಸಿದರು.