ದಾವಣಗೆರೆ: ಜಿಲ್ಲೆಯ ಎಲ್ಲಾ 31 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು 16,018 ವಿದ್ಯಾರ್ಥಿಗಳು ಬರೆದಿದ್ದಾರೆ. ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಎದುರಿಸಿದ್ದಾರೆ.
ದಾವಣಗೆರೆಯಲ್ಲಿ ದ್ವಿತೀಯ ಪಿಯು ಇಂಗ್ಲಿಷ್ ಎಕ್ಸಾಂ: ಮಾಸ್ಕ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು
ಕೊರೊನಾ ಲಾಕ್ಡೌನ್ನಿಂದ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಾವಣಗೆರೆ ಜಿಲ್ಲೆಯಲ್ಲಿ ಸೂಕ್ತ ಮುಂಜಾಗ್ರತ ಕ್ರಮಗಳೊಂದಿಗೆ ನಡೆಯಿತು.
ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಮೊದಲು ಸ್ಯಾನಿಟೈಸರ್ ನೀಡಲಾಯಿತು. ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶ ಮತ್ತು ಜೆರಾಕ್ಸ್, ಸೈಬರ್ ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಿಸಲಾಗಿತ್ತು.
ಪರೀಕ್ಷೆ ಸುಗಮವಾಗಿ ಮತ್ತು ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾಡಳಿತ ಸಹಕಾರದಿಂದ ಸ್ಯಾನಿಟೇಷನ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಯ್ದಿರಿಸಲು 1 ಮೀಟರ್ ಅಂತರದಲ್ಲಿ ಆಸನ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.