ಹರಿಹರ (ದಾವಣಗೆರೆ):ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರಿಂದ ನಗರದಲ್ಲಿ ಗುರುತಿಸಲ್ಪಟ್ಟಿರುವ 5 ಕಂಟೈನ್ಮೆಂಟ್ ಝೋನ್‌ಗಳ ಮೇಲೆ ನಿಗಾ ವಹಿಸಲು ಪ್ರತ್ಯೇಕ ಅಧಿಕಾರಿಗಳ ತಂಡ ರಚಿಸಲಾಗುತ್ತಿದೆ ಎಂದು ತಹಶಿಲ್ದಾರ್ ಕೆ.ಬಿ.ರಾಮಚಂದ್ರಪ್ಪ ಹೇಳಿದರು.
ನಗರದ ಮಿನಿ ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ರಾಜನಹಳ್ಳಿ ಗ್ರಾಮ ಸೇರಿದಂತೆ ನಗರದ ಅಗಸರಬೀದಿ, ಎ.ಕೆ.ಕಾಲೋನಿ, ಇಂದ್ರಾನಗರ, ಗಂಗಾನಗರ ಕಂಟೈನ್ಮೆಂಟ್ ಝೋನ್‌ಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆ, ಜಾಗೃತಿ ಮೂಡಿಸುವುದು, ಆರೋಗ್ಯ ತಪಾಸಣೆ ಮತ್ತಿತರೆ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗುವುದು. ಕಂಟೈನ್ಮೆಂಟ್ ಪ್ರದೇಶದಲ್ಲಿನ ಕ್ವಾರಂಟೈನ್‌ನಲ್ಲಿರುವ ನಿವಾಸಿಗಳು ಅಧಿಕಾರಿಗಳ ಕಣ್ತಪ್ಪಿಸಿ ಅಕ್ಕಪಕ್ಕದ ಬಡಾವಣೆ, ಬೇರೆ ಊರುಗಳಿಗೆ ತೆರಳುತ್ತಿದ್ದಾರೆ. ನಿರ್ಬಂಧಿತ ಪ್ರದೇಶದಿಂದ ಹೊರ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಆದರೆ ತಾವು ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಪೊಲೀಸ್ ಸಿಬ್ಬಂದಿಯೇ ಇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.