ದಾವಣಗೆರೆ:ಸ್ಮಾರ್ಟ್ ಸಿಟಿ ಯೋಜನೆಯಡಿ ಎ.ಬಿ.ಡಿ ಏರಿಯಾದ ಎಸ್.ಎಸ್.ಎಂ ನಗರ, ಬಿಡಿ ಲೇಔಟ್, ಪಾರ್ವತಮ್ಮ ನಗರಗಳಲ್ಲಿ ರೂ. 10 ಕೋಟಿ ವೆಚ್ಚದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಸಿಸಿ ಚರಂಡಿ, ಕವರಿಂಗ್ ಸ್ಲ್ಯಾಬ್ ಹಾಗೂ ಸಿಸಿ ರಸ್ತೆ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಉತ್ತಮ ರೀತಿಯಲ್ಲಿ ಗುತ್ತಿಗೆದಾರರು ಕೆಲಸ ನಿರ್ವಹಿಸಿ ಆದಷ್ಟು ಬೇಗ ಜನರ ಸೇವೆಗೆ ಒದಗಿಸಬೇಕು ಎಂದರು.
ಸಿಜಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲ ಎಂಬ ದೂರು ಕೇಳಿಬಂದಿದೆ. ಈಗಾಗಲೇ ಆಸ್ಪತ್ರೆಯಲ್ಲಿ 30 ವೆಂಟಿಲೇಟರ್ಗಳಿವೆ. ಆದರೆ ಆಪರೇಟರ್ ಮಾಡುವವರಿಲ್ಲ. ಕೂಡಲೇ ನೇಮಕ ಮಾಡಿಕೊಂಡು ಸಾರ್ವಜನಿಕರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಅಜಯ ಕುಮಾರ್ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿಯ ಕೆಲಸಗಳು ವಿಳಂಬವಾಗುತ್ತಿವೆ ಎಂಬ ಮಾತು ಕೇಳಿಬರುತ್ತಿವೆ. ಈ ಹಿನ್ನೆಲೆ ಸಾಕಷ್ಟು ಸಭೆ ಮಾಡಲಾಗಿದೆ. ಆದಷ್ಟು ಬೇಗ ಕೆಲಸ ಮಾಡಲು ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಕಾಮಗಾರಿ ಮುಗಿಸಲಾಗುವುದು. ಈಗಾಗಲೇ ಶೇ. 60 ರಷ್ಟು ಕೆಲಸವಾಗಿವೆ ಎಂದು ತಿಳಿಸಿದರು.