ಬೆಂಗಳೂರು/ದಾವಣಗೆರೆ: ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಅವರು ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರಿಗೆ ಈ ಬಾರಿ ಮತ್ತೊಮ್ಮೆ ಸಚಿವ ಸ್ಥಾನ ದಕ್ಕಿದೆ.
2013ರಲ್ಲಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮಲ್ಲಿಕಾರ್ಜುನ ಅವರಿಗೆ ಹೈ ಕಮಾಂಡ್ ಮತ್ತೊಮ್ಮೆ ಮಣೆ ಹಾಕಿದೆ. ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ್ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಸಿದ್ದರಾಮಯ್ಯ ಅಮೃತ ಮಹೋತ್ಸವದ ಯಶಸ್ವಿಗೆ ಕಾರಣಕರ್ತರಾಗಿದ್ದರು.
ಇದನ್ನೂ ಓದಿ:ಮೂರನೇ ಬಾರಿಯೂ ಅಜಯ್ ಸಿಂಗ್ಗೆ ತಪ್ಪಿದ ಸಚಿವ ಸ್ಥಾನ
ರಾಜಕೀಯ ಜೀವನ:ಬಿಕಾಂ ಪದವೀಧರರಾಗಿರುವ ಮಲ್ಲಿಕಾರ್ಜುನ ಅವರು 1989ರಲ್ಲಿ ದಾವಣಗೆರೆ ಮತ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1999ರಲ್ಲಿ ದಾವಣಗೆರೆ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳಾಗಿ ವಿಂಗಡಣೆಯಾದ ಬಳಿಕ ಗೆಲುವು ಸಾಧಿಸಿ ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವರಾಗಿದ್ದರು.
ಬಳಿಕ 2013ರಲ್ಲಿ ಗೆಲುವು ಸಾಧಿಸಿದ್ದರು. 2016ರಲ್ಲಿ ಶಾಮನೂರು ಶಿವಶಂಕರಪ್ಪ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಅಂದು ಅವರು ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾಗಿದ್ದರು. 2018 ರಲ್ಲಿ ಬಿಜೆಪಿ ಶಾಸಕ ಎಸ್. ಎ ರವೀಂದ್ರನಾಥ್ ವಿರುದ್ಧ ಸೋಲುಂಡ ಅವರು ಇದೀಗ 2023ರ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದ್ದಾರೆ.