ದಾವಣಗೆರೆ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಯುವತಿಯರು ಅಂಗಡಿಗೆ ಬಟ್ಟೆ ಖರೀದಿಸಲೆಂದು ತೆರಳಿದ್ದಾಗ ಕೆಲ ಕಿಡಿಗೇಡಿಗಳು ತಡೆಯೊಡ್ಡಿದ್ದಾರೆ. ಅಷ್ಟೇ ಅಲ್ಲದೆ ಬೇರೆ ಅಂಗಡಿಗಳಲ್ಲಿ ಬಟ್ಟೆಗಳನ್ನು ಖರೀದಿಸಿದರೂ ಬಟ್ಟೆಗಳಿದ್ದ ಬ್ಯಾಗನ್ನು ಬಿಸಾಡಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆಯ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಮೇಯರ್ ಬಿ.ಜಿ.ಅಜಯ್ ಕುಮಾರ್, ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಶಾಂತಿ ಸೌಹಾರ್ದತೆ ಕದಡುವ ಪ್ರಯತ್ನ ಮಾಡುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಮೇಯರ್ ನಗರದಲ್ಲಿ ಕೆಲ ಕಿಡಿಗೇಡಿಗಳು ಶಾಂತಿ ಸೌಹಾರ್ದತೆ ಕದಡುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಪೊಲೀಸರು ಕಡಿವಾಣ ಹಾಕಬೇಕು. ಅಂಗಡಿಗಳಲ್ಲಿ ಬಟ್ಟೆ ಖರೀದಿಸಲು ವಿರೋಧಿಸುವ ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪೊಲೀಸರು ಪುಂಡ ಯುವಕರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಹಿಂದಿನಿಂದಲೂ ಹಿಂದೂ ಹಾಗೂ ಮುಸ್ಲಿಂರ ನಡುವೆ ಉತ್ತಮ ಸ್ನೇಹ, ಬಾಂಧವ್ಯವಿದೆ. ಆದರೆ ಇದೀಗ ಕೆಲವು ಕಿಡಿಗೇಡಿಗಳು ಇಂತಹ ಕೃತ್ಯಗಳನ್ನು ನಡೆಸುವ ಮೂಲಕ ಬಾಂಧವ್ಯ ಹಾಳು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಯುವಕರು ತಮ್ಮ ಸಮುದಾಯದ ಯುವತಿಯರಿಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಪನೆ ನೀಡಿರುವ ಪಾಲಿಕೆ ಸದಸ್ಯ ಹಾಗೂ ಮುಸ್ಲಿಂ ಸಮುದಾಯದ ಮುಖಂಡ ಚಮನ್ ಸಾಬ್, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾರೂ ವಿಜೃಂಭಣೆಯಿಂದ ಹಬ್ಬ ಆಚರಣೆ ಮಾಡುವುದು ಬೇಡ. ಆದರೆ ಕೆಲವರು ಹೀಗೆ ಪುಂಡಾಟ ನಡೆಸಿದರೆ ತಾವು ಲೀಡರ್ ಆಗುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಅದಕ್ಕಾಗಿ ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.