ದಾವಣಗೆರೆಗೆ ಮತ್ತೆ ಕೊರೊನಾ ಬಾರದಂತೆ ನೋಡಿಕೊಳ್ಳಿ: ಶಾಸಕ ರವೀಂದ್ರನಾಥ್
ತಹಶೀಲ್ದಾರ್ ಕಚೇರಿಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಕುರಿತು ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಮಹಾಮಾರಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಿದೆ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.
ದಾವಣಗೆರೆ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಈಗಾಗಲೇ ಜಿಲ್ಲಾಡಳಿತ ಉತ್ತಮ ಕ್ರಮ ಕೈಗೊಂಡಿದೆ. ಅದನ್ನು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಬಾರದಂತೆ ನೋಡಿಕೊಳ್ಳುವುದರ ಮೂಲಕ ಮಹಾಮಾರಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಿದೆ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.
ತಹಶೀಲ್ದಾರ್ ಕಚೇರಿಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಕುರಿತು ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಹಂತದಲ್ಲಿ ತಾಲೂಕು ಮಟ್ಟದಲ್ಲಿ ಸಭೆ ಕರೆದು ಕೊರೊನಾ ವೈರಸ್ ನಿಯಂತ್ರಣದ ಕುರಿತು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವ ಉದ್ದೇಶ ಇದಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಇನ್ನಷ್ಟು ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ ಮಾತನಾಡಿ, ಕೋವಿಡ್-19 ಸಂಬಂಧ ಚರ್ಚಿಸಲು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಕೊರೊನಾ ನಿಯಂತ್ರಣದ ಕುರಿತು ಕ್ರಮ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಜಿಲ್ಲೆಯಲ್ಲಿ ಜಿಲ್ಲಾಡಳಿತ, ವೈದ್ಯಕೀಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ತಾಲೂಕು ಅಧಿಕಾರಿಗಳು ಕೊರೊನಾ ವೈರಸ್ ನಿರ್ಮೂಲನೆಗೆ ಶ್ರಮಿಸುತ್ತಿದ್ದಾರೆ. ಇದು ಶ್ಲಾಘನೀಯ ವಿಷಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.