ದಾವಣಗೆರೆ: ಕಳಪೆ ಬಿತ್ತನೆ ಬೀಜ ಮಾರಾಟದ ಮೇಲೆ ತೀವ್ರ ನಿಗಾ ವಹಿಸಬೇಕು. ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಳಪೆ ಬಿತ್ತನೆ ಬೀಜ ಮಾರಾಟದ ಬಗ್ಗೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಸೂಚನೆ - Davanagere
ಕೃಷಿ ಇಲಾಖೆಯ 2020-21ನೇ ಸಾಲಿನ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಈ ವೇಳೆ ಕಳಪೆ ಬಿತ್ತನೆ ಬೀಜಗಳ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಇಲಾಖೆಯ 2020-21ನೇ ಸಾಲಿನ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳಪೆ ಬಿತ್ತನೆ ಬೀಜದ ಬಗ್ಗೆ ರೈತರಿಂದ ಎಲ್ಲಿಯೂ ಕೂಡ ದೂರು ಬರಬಾರದು. ಒಂದು ವೇಳೆ ದೂರು ಬಂದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಯಾವುದೇ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಬರದಂತೆ ನೋಡಿಕೊಳ್ಳಿ. ಎಲ್ಲಾ ಕಡೆಗಳಲ್ಲಿಯೂ ಸರಿಯಾಗಿ ವಿತರಿಸಬೇಕು. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಬಾರದು. ಆಗಸ್ಟ್ ತಿಂಗಳವರೆಗೂ ದಾಸ್ತಾನು ಇರುವಂತೆ ನೋಡಿಕೊಂಡು ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು ಎಂದು ತಾಕೀತು ಮಾಡಿದರು.