ಧಾರವಾಡ:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಒಳಪಡುವ ತಾಲೂಕುಗಳಲ್ಲಿ ಸೆಪ್ಪೆಂಬರ್ 1ರ ಬೆಳಗ್ಗೆ 6 ಗಂಟೆಯಿಂದ ಸೆ. 3ರ ಸಂಜೆ 6 ಗಂಟೆಯವರೆಗೆ ಸಿಆರ್ಪಿಸಿ ಕಾಯ್ದೆ, 1973ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕಲಂ 35 ರಡಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಧಾರವಾಡ, ಹುಬ್ಬಳ್ಳಿ ಮತ್ತು ಹುಬ್ಬಳ್ಳಿ ನಗರ ತಾಲೂಕುಗಳ ವ್ಯಾಪ್ತಿಯಲ್ಲಿ ಐಪಿಸಿ 144ರಡಿ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದ್ದು, ಆ ದಿನಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದನ್ನು ನಿಷೇಧಿಸಿದ್ದಾರೆ.
ಸೆಕ್ಷನ್ 144 ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಚುನಾವಣಾ ಅಭ್ಯರ್ಥಿಗಳು, ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಬಹುದಾಗಿದ್ದು, ಅದರಲ್ಲಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯ ನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರತಿಬಂಧಕಾಜ್ಞೆಯ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.