ಕರ್ನಾಟಕ

karnataka

ETV Bharat / state

ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ರೆ ಅಧಿಕಾರಿಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಕಾರ್ಯ ತಂಡದ ಸಭೆ ನಡೆಸಲಾಯಿತು. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಎಚ್ಚರಿಸಿದ್ರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​

By

Published : Jul 8, 2020, 8:57 PM IST

ಧಾರವಾಡ: ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಪ್ರಕೃತಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಕಾರ್ಯ ತಂಡದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ನಿಯಂತ್ರಣದ ಕಾರ್ಯ ಉತ್ತಮವಾಗಿ ಸಾಗಿದೆ. ಇದೀಗ ಹವಾಮಾನದಲ್ಲಿ ಬದಲಾವಣೆ ಆಗುತ್ತಿರುವುದು ಹಾಗೂ ದೇಶದಾದ್ಯಂತ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿ ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಮೊದಲ ಪ್ರಾಶಸ್ತ್ಯ ನೀಡಿ ಕರ್ತವ್ಯ ನಿರ್ವಹಿಸಬೇಕು. ಬೇಜವಾಬ್ದಾರಿ ತೋರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಸೂಚನೆ ನೀಡಿದರು.

ನಿಗದಿತ ಕೋವಿಡ್ ಆಸ್ಪತ್ರೆಗಳು, ಕೋವಿಡ್ ಕೇರ್ ಸೆಂಟರ್​​ಗಳಲ್ಲಿ ಅಗತ್ಯ ಹಾಸಿಗೆ ಮತ್ತು ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ ನಿಯೋಜಿಸುವ ಕಾರ್ಯ ಆದ್ಯತೆಯಡಿ ಕೈಗೊಳ್ಳಬೇಕು. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತಮ್ಮ ಒಟ್ಟು ಸಾಮರ್ಥ್ಯದ ಹಾಸಿಗೆಗಳಲ್ಲಿ ಶೇ. 50ರಷ್ಟು ಕೋವಿಡ್ ಚಿಕಿತ್ಸೆಗೆ, ಉಳಿದ ಶೇ. 50ರಷ್ಟು ಇತರೆ ಸಾಮಾನ್ಯ ಕಾಯಿಲೆಗಳ ಚಿಕಿತ್ಸೆಗೆ ಮೀಸಲಿಡಬೇಕು. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರನ್ನು ಪತ್ತೆ ಮಾಡುವ ತಂಡದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿಸಿಕೊಂಡು ಸೂಕ್ತ ತರಬೇತಿ ನೀಡಿ ಪತ್ತೆ ಕಾರ್ಯ ಇನ್ನಷ್ಟು ಚುರುಕುಗೊಳಿಸಬೇಕು ಎಂದು ಸೂಚನೆ ನೀಡಿದ್ರು.

ಹೋಮ್​​ ಕ್ವಾರಂಟೈನ್ ಉಲ್ಲಂಘಿಸುವವರ ಪಟ್ಟಿಯನ್ನು ಪ್ರತಿದಿನ ತಹಶೀಲ್ದಾರ್​ಗೆ ನೀಡಿ ಅಂತಹ ವ್ಯಕ್ತಿಗಳನ್ನು ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಬೇಕು. ಪೊಲೀಸರ ಮೂಲಕ ಪ್ರಕರಣ ದಾಖಲಿಸುವುದು ಮತ್ತು ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳುವ ಕಾರ್ಯ ನಡೆಯಬೇಕು. ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಗಳ ಪಾರ್ಥಿವ ಶರೀರದ ಹಸ್ತಾಂತರ ಮತ್ತು ಅಂತ್ಯಕ್ರಿಯೆ ಸರ್ಕಾರದ ಮಾರ್ಗಸೂಚಿಗಳಂತೆ ನಡೆಯಬೇಕು. ಈ ಕಾರ್ಯದಲ್ಲಿ ಲೋಪವಾಗಬಾರದು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ABOUT THE AUTHOR

...view details