ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಈವರೆಗೆ ಜೆಡಿಎಸ್ನಲ್ಲಿದ್ದು ರಾಜಕೀಯದಲ್ಲಿ ಬೆಳೆದಿರುವ ಬಸವರಾಜ್ ಹೊರಟ್ಟಿ ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ. ನಾನು ಬಿಜೆಪಿ ಸೇರುವುದು ಖಚಿತ. ಈಗಾಗಲೇ ಈ ಬಗ್ಗೆ ಬಿಜೆಪಿ ವರಿಷ್ಠರ ಜೊತೆ ಮಾತುಕತೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದರು. ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಅವರು ತಿಳಿಸಿದರು.