ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಎರಡನೇ ದಿನಕ್ಕೆ ಹೋರಾಟ ಕಾಲಿಟ್ಟಿದೆ. ಈ ವೇಳೆ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಆಗಮಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು.
ಗುರುವಾರ ರಾತ್ರಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಶಾಸಕ ಅರವಿಂದ ಬೆಲ್ಲದ ಒಳಗೊಂಡಂತೆ ಬಿಜೆಪಿ ಕಾರ್ಯಕರ್ತರು ಮಹಾನಗರ ಪಾಲಿಕೆ ಬಳಿ ಇಡೀ ರಾತ್ರಿ ಪ್ರತಿಭಟನೆ ನಡೆಸಿದರು. ಇತ್ತ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಸಂಬಂಧ ಪಾಲಿಕೆಯ ಠರಾವು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಯಾಗಲಿದೆ. ಧಾರವಾಡ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ. ಇದರೊಂದಿಗೆ ಹಕ್ಕುಚ್ಯುತಿ ಪ್ರಶ್ನೆ ಮಾಡಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಗುಂಟ್ಲಾ ಅವರಿಂದ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದ್ದು, ಈ ಒಂದು ಅರ್ಜಿ ಕೂಡ ಇಂದು ವಿಚಾರಣೆ ಆಗಲಿದೆ.
ಇದನ್ನೂ ಓದಿ :ಭಟ್ಕಳ : ಸಾರ್ವಜನಿಕ ಗಣೇಶೋತ್ಸವ ಮಂಡಳಿ ಜೊತೆ ಪೊಲೀಸ್ ಇಲಾಖೆ ಶಾಂತಿ ಸಭೆ